×
Ad

ಶಿಕ್ಷಕರ ವರ್ಗಾವಣೆ ತಿದ್ದುಪಡಿ ಸಹಿತ ಮೂರು ವಿಧೇಯಕಗಳ ಮಂಡನೆ

Update: 2021-12-16 23:41 IST

ಬೆಳಗಾವಿ, ಡಿ. 15: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಸುವ್ಯವಸ್ಥಿತಗೊಳಿಸಲು ಹಾಗೂ ಅವರ ಆದ್ಯತೆಯನುಸಾರ ಉಪನ್ಯಾಸಕರು ಕೋರುವ ಸ್ಥಳ ನಿಯೋಜನೆಗಳಲ್ಲಿ ಆಯ್ಕೆ ಮತ್ತು ಹೊಂದಾಣಿಕೆ ಮೂಲಕ ಸ್ಥಳ ನಿಯುಕ್ತಿಗೆ ಅವಕಾಶ ಕಲ್ಪಿಸುವ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ) (ಎರಡನೆ ತಿದ್ದುಪಡಿ) ವಿಧೇಯಕ’ ಸೇರಿದಂತೆ ಮೂರು ವಿಧೇಯಕಗಳನ್ನು ಮಂಡನೆ ಮಾಡಲಾಯಿತು.

ಗುರುವಾರ ವಿಧಾನಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಿಕ್ಷಕರ ವರ್ಗಾವಣೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಅಥವಾ ಉಪನ್ಯಾಸಕರ ವರ್ಗಾವಣೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತ ಅವಕಾಶ ಖಚಿತಪಡಿಸಿಕೊಳ್ಳಲು, ಗ್ರಾಮೀಣ ಪ್ರದೇಶಗಳಲ್ಲಿ ಉಪನ್ಯಾಸಕರ ಲಭ್ಯತೆ ಖಚಿತಪಡಿಸಿಕೊಳ್ಳಲು, ಹುದ್ದೆಗಳ ಅಸಮರ್ಪಕ ಹಂಚಿಕೆ ಸರಿಪಡಿಸಲು ಉದ್ದೇಶಿತ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.

ಐಐಟಿ ಮಾದರಿಯಲ್ಲಿ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು (ಯುವಿಸಿಇ) ಬೆಂಗಳೂರು ಇದನ್ನು ಇಂಡಿಯನ್ ಇನ್ಸ್‍ಸ್ಟಿಟ್ಯೂಟ್ ಆಫ್ ಆಫ್ ಟೆಕ್ನಾಲಜಿ, ಇಂಡಿಯನ್ ಇನ್ಸ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಹಾಗೂ ಇತರೆ ರಾಷ್ಟ್ರೀಯ ಮಹತ್ವದ ಸಂಸ್ಥೆ ಮಾದರಿಯಲ್ಲಿ ರೂಪಿಸಲು ಅವಕಾಶ ಕಲ್ಪಿಸುವ ‘ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯ ವಿಧೇಯಕ-2021’ನ್ನು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಮಂಡನೆ ಮಾಡಿದರು.

ಹೊಸದಾಗಿ ಶಿವಮೊಗ್ಗದಲ್ಲಿ ‘ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ’ ಸ್ಥಾಪಿಸಲು ಅವಕಾಶ ಕಲ್ಪಿಸುವ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ವಿಧೇಯಕ ಸೇರಿದಂತೆ ಒಟ್ಟು ಮೂರು ವಿಧೇಯಕಗಳನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News