ರಾಜ್ಯದಲ್ಲಿ ಶೀಘ್ರ ಕ್ರೀಡಾ ವಿವಿ ಸ್ಥಾಪನೆ: ಸಚಿವ ನಾರಾಯಣಗೌಡ

Update: 2021-12-17 16:51 GMT

ಬೆಳಗಾವಿ , ಡಿ.17: ರಾಜ್ಯದಲ್ಲಿ ಶೀಘ್ರದಲ್ಲೇ ಕ್ರೀಡಾ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಲಾಗುತ್ತಿದ್ದು, ಈ ಸಂಬಂಧ ಹಲವು ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಹೇಳಿದರು.

ಶುಕ್ರವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಎಸ್.ವೀಣಾ ಅಚ್ಚಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಂದು ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂಬ ಉದ್ದೇಶ ಸರಕಾರಕ್ಕೆ ಇದೆ. ಈ ಸಂಬಂಧ ಕೇಂದ್ರ ಸರಕಾರ ಹಾಗೂ ವಿಶ್ವವಿದ್ಯಾಲಯಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದರು.

ಈ ವೇಳೆ ಕೊಡಗು ಜಿಲ್ಲೆಯಲ್ಲಿಯೇ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂದು ಎಸ್.ವೀಣಾ ಅಚ್ಚಯ್ಯ ಬೇಡಿಕೆ ಇಟ್ಟರು. ಆಗ ಉತ್ತರಿಸಿದ ಸಚಿವರು, ಸದ್ಯ ಯಾವ ಜಾಗದಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂದು ನಿರ್ಧಾರ ಮಾಡಿಕೊಂಡಿಲ್ಲ. ಈ ಬಗ್ಗೆ ಚರ್ಚೆ, ಸಭೆಗಳು ನಡೆಸುವಾಗ ನಿಮ್ಮನ್ನು ಆಹ್ವಾನಿಸುತ್ತೇವೆ ಎಂದು ತಿಳಿಸಿದರು.


ಅಲ್ಲದೆ ಇಡೀ ಕರ್ನಾಟಕದಲ್ಲಿ ಕೊಡಗು ಜಿಲ್ಲೆ ಕ್ರೀಡೆಗೆ ಮಹತ್ವ ನೀಡಿದೆ. ಈಗಾಗಲೇ 25 ಕ್ರೀಡಾ ಪಟುಗಳು ಅನೇಕ ಕ್ರೀಡೆಗಳಲ್ಲಿ ಸಾಧನೆ ಮಾಡಿದ್ದಾರೆ ಎಂದು ಸಚಿವರು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News