ಕಿಡಿಗೇಡಿಗಳಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ
ಬೆಳಗಾವಿ, ಡಿ.18: ಇಲ್ಲಿನ ಅನಗೋಳದ ಕನಕದಾಸ ಕಾಲನಿಯಲ್ಲಿರುವ ಕ್ರಾಂತಿವೀರ ಸಂಗೊಳ್ಳಿರಾಯಣ್ಣರ ಪ್ರತಿಮೆಯನ್ನು ಕಿಡಿಗೇಡಿಗಳು ಶನಿವಾರ ಬೆಳಗಿನ ಜಾವ ಭಗ್ನಗೊಳಿಸಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಕಂಡುಬಂದಿದೆ.
ಘಟನೆಯ ಹಿನ್ನೆಲೆಯಲ್ಲಿ ಬೆಳಗಾವಿ ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಶನಿವಾರ ಬೆಳಗ್ಗೆಯಿಂದ ಡಿ.19ರಂದು ರಾತ್ರಿ 8 ಗಂಟೆಯ ವರೆಗೆ 144 ಸೆಕ್ಷನ್ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಸಂಗೊಳ್ಳಿರಾಯಣ್ಣರ ಪ್ರತಿಮೆಯ ಮುಖವನ್ನು ತಲವಾರು ಬಳಸಿ ವಿರೂಪಗೊಳಿಸಿದ್ದಾರೆ. ಅಲ್ಲದೆ ಪ್ರತಿಮೆಯಲ್ಲಿದ್ದ ಖಡ್ಗವನ್ನು ಕಿತ್ತು ಹಾಕಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ್ದ ತಿಲಕವಾಡಿ ಠಾಣೆ ಪೊಲೀಸರು ಪ್ರತಿಮೆಯನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಸುರಿದಿರುವ ಆರೋಪ ಕೇಳಿಬಂದಿದ್ದು, ಇದರ ಬೆನ್ನಲ್ಲೆ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಕರ್ತವ್ಯಕ್ಕೆ ಬಂದಿರುವ ಸರಕಾರಿ ವಾಹನಗಳ ಮೇಲೆ ಕಳೆದ ರಾತ್ರಿ ಕಲ್ಲು ತೂರಾಟ ನಡೆಸಿರುವುದು ವರದಿಯಾಗಿದೆ. ಲಾಡ್ಜ್ ಮುಂಭಾಗದಲ್ಲಿ ನಿಲ್ಲಿಸಿದ್ದ ಸರ್ಕಾರದ ಕಾರುಗಳ ಮೇಲೆ ಕಲ್ಲು ತೂರಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. 20ಕ್ಕೂ ಅಧಿಕ ವಾಹನಗಳು ಜಖಂಗೊಂಡಿವೆ ಎಂದು ತಿಳಿದುಬಂದಿದೆ.
ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ನಗರಾದ್ಯಾಂತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.