ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ನಮ್ಮ ಸರಕಾರದ ಹೊಣೆ: ಸಿಎಂ ಬೊಮ್ಮಾಯಿ

Update: 2021-12-18 12:32 GMT
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ, ಡಿ. 18: ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ನಮ್ಮ ಸರಕಾರದ ಹೊಣೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ನಡೆದ ಪ್ರಕರಣದ ಬಗ್ಗೆ ಮಾತನಾಡಿದರು. 

ಕೆಲವರು ಕಾನೂನು ಬಾಹಿರವಾಗಿ ಪುಂಡಾಟಿಕೆ ಮಾಡಿದ್ದಾರೆ. ಕರ್ನಾಟಕದ ಕಾನೂನು ಸುವ್ಯವಸ್ಥೆ ನಮ್ಮ ಜವಾಬ್ದಾರಿ. ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವುದು ಅಲ್ಲಿನ ಸರಕಾರದ ಜವಾಬ್ದಾರಿ. ಅಲ್ಲಿನ ಕನ್ನಡಿಗರ ರಕ್ಷಣೆ ಹಾಗೂ ಬಸ್ಸು ಇತ್ಯಾದಿ ವಾಹನಗಳ ರಕ್ಷಣೆ ಮಾಡಲು ನಮ್ಮ ಪೋಲಿಸ್ ಮಹಾ ನಿರ್ದೇಶಕರು ಅಲ್ಲಿನ ಪೊಲೀಸ್ ಮಹಾನಿರ್ದೇಶಕರೊಂದಿಗೆ ಹಾಗೂ ಗೃಹ ಸಚಿವರು ಮಹಾರಾಷ್ಟ್ರದ ಗೃಹ ಸಚಿವರೊಂದಿಗೆ  ಮಾತನಾಡಲಿದ್ದಾರೆ. ಮೊದಲು ಅಧಿಕಾರಿಗಳು ಮಾತನಾಡುತ್ತಾರೆ. ನಂತರ ಅಗತ್ಯ ಬಿದ್ದರೆ ಅಲ್ಲಿನ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದರು.

ಶಿವಸೇನೆಯ ಸಂಜಯ್ ರಾವತ್ ಅವರು ಮರಾಠಿಗಳು ಒಂದಾಗುವಂತೆ ಕರೆ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಜವಾಬ್ದಾರಿ ಇರುವ ಜನರು ಯಾರನ್ನೂ ಯಾವ ಸಮಯದಲ್ಲಿಯೂ ಪ್ರಚೋದನೆ ಮಾಡಬಾರದು. ಛತ್ರಪತಿ ಶಿವಾಜಿ, ಸಂಗೊಳ್ಳಿ ರಾಯಣ್ಣ, ಕಿತ್ತೂರು ಚನ್ನಮ್ಮ ಸ್ವಾತಂತ್ರ‍್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ, ದೇಶವನ್ನು ಒಗ್ಗೂಡಿಸಿದವರು. ಅವರ ಹೆಸರಿನಲ್ಲಿ ನಾವು ಜಗಳವಾಡಿಕೊಂಡು ಒಡಕು ಮೂಡಿಸಿದರೆ ಅದು ಅವರ ಹೋರಾಟಕ್ಕೆ ಅನ್ಯಾಯವೆಸಗಿದಂತಾಗುತ್ತದೆ. ಕಾನೂನನ್ನ ಕೈಗೆ ತೆಗೆದುಕೊಂಡು ಯಾರನ್ನೂ ಇಂತಹ ಕೆಲಸಗಳನ್ನು ಮಾಡಲು ಕುಮ್ಮಕ್ಕು ನೀಡಬಾರದು ಎಂದರು.

ಕಿಡಿಗೇಡಿಗಳನ್ನು ವಶಕ್ಕೆ ಪಡೆದು ಎಫ್‌ಐಆರ್ ದಾಖಲಿಸಲಾಗಿದೆ: ಆರಗ ಜ್ಞಾನೇಂದ್ರ
ಬೆಳಗಾವಿ ನಗರದಲ್ಲಿ ಪ್ರಾತಸ್ಮರಣೀಯ ವೀರನಾದ ಸಂಗೊಳ್ಳಿ ರಾಯಣ್ಣರವರ ಪ್ರತಿಮೆಗೆ ಹಾನಿ ಮಾಡಿರುವ ಘಟನೆಯನ್ನು ಖಂಡಿಸುತ್ತೇನೆ. ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಮಹಾರಾಜ್ ಅವರುಗಳು ನಮ್ಮೆಲ್ಲರ ಹೆಮ್ಮೆಯ ಪ್ರತೀಕವಾಗಿದ್ದಾರೆ. ಪ್ರತಿಯೊಬ್ಬ ನಾಗರಿಕರೂ ಹೆಮ್ಮೆ ಹಾಗೂ ಗರ್ವದಿಂದ ನೆನಸಿಕೊಳ್ಳುವಂತ ಭಾರತೀಯ ಪುತ್ರರು. ಇವರ ಹೆಸರಿನಲ್ಲಿ ಕೆಲವು ಕಿಡಿಗೇಡಿಗಳು ದುಷ್ಕೃತ್ಯ ನಡೆಸಿ ಭಾಷಾ ಹಾಗೂ ಸಹೋದರತ್ವ ಬಾಂಧವ್ಯವನ್ನು ಕೆಡಿಸುವಂತಹ ಕೃತ್ಯ ಎಸಗಿರುವ ಘಟನೆ ಅಕ್ಷಮ್ಯ ಅಪರಾಧವಾಗಿದೆ. ಈ ಕುರಿತು ಮಾಹಿತಿಯನ್ನು ಪಡೆದುಕೊಂಡಿದ್ದೇನೆ ಹಾಗೂ ಬೆಂಗಳೂರು-ಬೆಳಗಾವಿ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಎಫ್‌ಐಅರ್ ದಾಖಲಾಗಿದ್ದು, ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ರಾಜ್ಯದ ಜನತೆ ಶಾಂತಿ ಹಾಗೂ ಸಾಮರಸ್ಯ ಕಾಪಾಡಲು ಸಹಕರಿಸಬೇಕೆಂದು ವಿನಂತಿಸುತ್ತೇನೆ.
-ಆರಗ ಜ್ಞಾನೇಂದ್ರ, ಗೃಹ ಸಚಿವ  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News