ಬೈರತಿ ಬಸವರಾಜ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಬೆಳಗಾವಿ, ಡಿ.19: ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ ಭೂ ಹಗರಣದ ಪ್ರಕರಣದ ಹಿನ್ನೆಲೆಯಲ್ಲಿ ಕೂಡಲೇ ರಾಜೀನಾಮೆ ನೀಡಬೇಕೆಂದು ಹಾಗೂ ದೇಶಪ್ರೇಮಿ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸಿ ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯ ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅದರಲ್ಲೂ ಬಿಜೆಪಿ ಸರಕಾರದ ಅವಧಿಯಲ್ಲಿ ಶೇಕಡ ನಲವತ್ತರಷ್ಟು ಲಂಚ ಪಡೆದಿರುವ ಬಗ್ಗೆ ಈಗಾಗಲೇ ಬಹಿರಂಗವಾಗಿದೆ. ಈಗ ಮತ್ತೊಂದು ಪ್ರಕರಣದಲ್ಲಿ ಖಾಸಗಿ ಭೂಮಿಯನ್ನು ಕಬಳಿಸಿರುವ ಪ್ರಕರಣದಲ್ಲಿ ಆರೋಪ ಹೊತ್ತಿರುವ ಕೆಆರ್ ಪುರ ಶಾಸಕ ಸಚಿವ ಬೈರತಿ ಬಸವರಾಜ ಕೂಡಲೇ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವೆ ಮುಖ್ಯಮಂತ್ರಿಗಳು ಕೂಡಲೇ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು.
ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯನ್ನು ಬಿಜೆಪಿ ಈಗಾಗಲೇ ಕಳೆದುಕೊಂಡಿದೆ. ಬಿಜೆಪಿ ಸರಕಾರದಲ್ಲಿ ಅತಿ ಹೆಚ್ಚು ಸಚಿವರು ಭ್ರಷ್ಟಾಚಾರದಲ್ಲಿ ಹಾಗೂ ಅನೈತಿಕ ಚಟುವಟಿಕೆಯಲ್ಲಿ ಭಾಗವಹಿಸಿದವರೇ ಹೆಚ್ಚಿದ್ದಾರೆ. ಈ ಬಗ್ಗೆ ಬಿಜೆಪಿ ಮೌನವಹಿಸಿರುವುದನ್ನು ಗಮನಿಸಿದರೆ ಪಕ್ಷವೇ ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದೆ ಎಂಬುದು ಬಹಿರಂಗವಾಗಿದೆ.
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಿ ಅಪಮಾನಗೊಳಿಸುವುದು ಸ್ವಾತಂತ್ರ ಹೋರಾಟಗಾರರಿಗೆ ಮಾಡಿದ ಅವಮಾನವಾಗಿದೆ. ಇಂತಹ ಹೇಯ ಕೃತ್ಯದಲ್ಲಿ ಭಾಗಿಯಾಗಿರುವ ದೇಶದ್ರೋಹಿಗಳನ್ನು ಬಂಧಿಸಿ ಕೂಡಲೇ ಗಲ್ಲಿಗೇರಿಸಬೇಕು. ನಾಡ ಧ್ವಜವನ್ನು ಸುಡುವ ಮೂಲಕ ಕನ್ನಡಿಗರ ಭಾವನೆಗೆ ಧಕ್ಕೆ ತಂದಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನೆ ಮೂಲಕ ಆಗ್ರಹಪಡಿಸಲಾಯಿತು.
ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಎಸ್.ಮನೋಹರ್, ಈ.ಆನಂದ್, ಜಿ.ಜನಾರ್ಧನ್, ಪುಟ್ಟರಾಜು, ಪ್ರಕಾಶ್, ವೆಂಕಟೇಶ್, ಚಂದ್ರಶೇಖರ್ ಹಾಗೂ ಪಕ್ಷದ ಮುಖಂಡರು ಭಾಗವಹಿಸಿದ್ದರು