ಸಚಿವ ಬೈರತಿ ಬಸವರಾಜ ರಾಜೀನಾಮೆಗೆ ಸದನದಲ್ಲಿ ಕಾಂಗ್ರೆಸ್ ಶಾಸಕರ ಒತ್ತಾಯ, ಸಭಾತ್ಯಾಗ

Update: 2021-12-20 18:05 GMT

ಬೆಳಗಾವಿ, ಡಿ.20: ಭೂ ಅಕ್ರಮಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ವಿರುದ್ಧ ಎಫ್‍ಐಆರ್ ದಾಖಲಾಗಿರುವುದರಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಸದನದಲ್ಲಿ ಈ ವಿಚಾರ ನಿಲುವಳಿ ಸೂಚನೆಯಡಿ ಚರ್ಚೆ ನಡೆಸಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭಾತ್ಯಾಗ ನಡೆಸಿದರು.

ಸೋಮವಾರ ಭೋಜನ ವಿರಾಮದ ನಂತರ ಸದನ ಸೇರಿದಾಗ ಕಾಂಗ್ರೆಸ್ ಸದಸ್ಯರು ಸದನ ಬಾವಿಯಲ್ಲಿ ಧರಣಿ ಮುಂದುವರೆಸಿದರು. ಅಲ್ಲದೆ, ಕನ್ನಡ ಧ್ವಜಕ್ಕೆ ಬೆಂಕಿ, ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ್ದು, ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವುದು ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡಿಗರ ವಾಹನಗಳ ಮೇಲೆ ದಾಳಿ ನಡೆಸಿರುವ ವಿಚಾರ ಚರ್ಚೆಗೆ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿ ಜೆಡಿಎಸ್ ಸದಸ್ಯರು ಘೋಷಣೆಗಳನ್ನು ಕೂಗುತ್ತಿದ್ದರು.

ಈ ಗದ್ದಲದ ನಡುವೆಯೇ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬೈರತಿ ಬಸವರಾಜ ವಿರುದ್ಧ ಜೆಎಂಎಫ್‍ಸಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ವಿವಿಧ ಸೆಕ್ಷನ್‍ಗಳಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ. ನಿಯಮ 60ರಡಿ ನಿಲುವಳಿ ಸೂಚನೆಯಡಿ ಈ ವಿಷಯ ಚರ್ಚೆಗೆ ನಮಗೆ ಅವಕಾಶ ನೀಡಿಲ್ಲ ಎಂದರು.

ಇದೊಂದು ಭಂಡ ಸರಕಾರ, ಇವರ ಆಡಳಿತದಲ್ಲಿ ಭ್ರಷ್ಟಾಚಾರ ಮಿರಿ ಮೀರಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಬೇಕಿದೆ. ಕನ್ನಡ ಧ್ವಜ ಸುಟ್ಟಿರುವ ಘಟನೆ, ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ, ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವ ವಿಚಾರದಲ್ಲಿ ಕನ್ನಡಪರ ಸಂಘಟನೆಗಳು ಧರಣಿಗಳನ್ನು ಮಾಡುತ್ತಿದ್ದಾರೆ. ಆದುದರಿಂದ, ಸರಕಾರದ ಭಂಡತನ ವಿರೋಧಿಸಿ ನಾವು ಧರಣಿ ಹಿಂಪಡೆದು, ಸಭಾತ್ಯಾಗ ಮಾಡುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News