ಬೆಳಗಾವಿ: ಎಸ್ಸಿಪಿ-ಟಿಎಸ್ಪಿ ಅನುದಾನ ಸದ್ಬಳಕೆಗೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಧರಣಿ

Update: 2021-12-23 04:55 GMT

ಬೆಳಗಾವಿ, ಡಿ.23: ಪರಿಶಿಷ್ಟ ಜಾತಿ(ಎಸ್ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ಟಿ)ದ ಅಭಿವೃದ್ಧಿಗೆ ಮೀಸಲಿಟ್ಟ ಎಸ್ಸಿಪಿ-ಟಿಎಸ್ಪಿ ಅನುದಾನ ಸದ್ಬಳಕೆ, ಹಣ ಬಿಡುಗಡೆ, ವೆಚ್ಚ ಮಾಡಿರುವ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಆಗ್ರಹಿಸಿ ಇಲ್ಲಿನ ಸುವರ್ಣ ಗಾರ್ಡನ್‌ನಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಒಕ್ಕೂಟದ ಅಧ್ಯಕ್ಷ ಬಿ.ಚನ್ನಕೃಷ್ಣಪ್ಪ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ನೂರಾರು ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಎಸ್ಸಿಪಿ-ಟಿಎಸ್ಪಿ ಅನುದಾನ ದುರ್ಬಳಕೆ ಮತ್ತು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ಮೇಲೆ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಒಕ್ಕೂಟ ಅಧ್ಯಕ್ಷ ಚನ್ನಕೃಷ್ಣಪ್ಪ, ಪಿಟಿಸಿಎಲ್ ಕಾಯ್ದೆ ಮೂಲ ಉದ್ದೇಶದ ಈಡೇರಿಕೆಗಾಗಿ ಮತ್ತು ಶೋಷಿತ ಸಮುದಾಯದ ಭೂ ಒಡೆತನ ರಕ್ಷಿಸಲು ಸರಕಾರ ಸುಗ್ರೀವಾಜ್ಞೆ ಹೊರಡಿಸಬೇಕು. ಈ ಸಂಬಂಧ ಸುಪ್ರೀಂ ಕೋರ್ಟ್ ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಮನವಿ ಮಾಡಿದರು.

ಬೆಳಗಾವಿ ಸುವರ್ಣವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಿಸಬೇಕು. ಧಾರವಾಡ ನಗರ, ಶ್ರೀರಾಮನಗರ, ಅತ್ತಿಕೊಳ್ಳ ಗ್ರಾಮದ ವಸತಿರಹಿತ ನಿರಾಶ್ರಿತರಿಗೆ ಪುನರ್ ವಸತಿ ಕಲ್ಪಿಸಬೇಕು. ಭೂಮಿ ಮಂಜೂರು ಮಾಡಲು ಕ್ರಮ ವಹಿಸಬೇಕು ಎಂದು ಅವರು ಆಗ್ರಹಿಸಿದರು.

ಧರಣಿಯಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಆರ್‌.ಎಂ.ಆರ್.ರಮೇಶ್, ಉಪಾಧ್ಯಕ್ಷ ಮರಿಯಪ್ಪ, ಕನ್ನಹಳ್ಳಿ ಕೃಷ್ಣಪ್ಪ, ಲಕ್ಷ್ಮಣ್ ಮಹಿಳಾ ಘಟಕದ ಅಧ್ಯಕ್ಷೆ ಕಮಲಮ್ಮ, ವಿಭಾಗೀಯ ಸಂಚಾಲಕ ಗಣೇಶ್ ನಿಂಬಣ್ಣನವರ್, ಬೆಳಗಾವಿ ಮತ್ತು ಧಾರವಾಡ ಜಿಲ್ಲಾಧ್ಯಕ್ಷರು ಸೇರಿದಂತೆ ಇನ್ನಿತರ ಮುಖಂಡರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News