ಮಂಗಳೂರು ಮನಪಾ: ಇಂದಿನಿಂದ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ
ಮಂಗಳೂರು, ಡಿ23: ನಗರದೆಲ್ಲೆಡೆ ಫುಟ್ ಪಾತ್ ಮತ್ತು ರಸ್ತೆಗಳಲ್ಲಿ ವ್ಯಾಪಾರ ನಡೆಸುತ್ತಿರುವ ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸಲು ಇಂದಿನಿಂದ (ಡಿ.23ರಿಂದ) ಕಾರ್ಯಾಚರಣೆ ಆರಂಭಿಸಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧರಿಸಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಮತ್ತು ಫುಟ್ ಪಾತ್ ಗಳನ್ನು ಅತಿಕ್ರಮಿಸಿ ಹಲವು ಕಡೆಗಳಲ್ಲಿ ಗೂಡಂಗಡಿ ವ್ಯಾಪಾರ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಈ ಬಗ್ಗೆ ಚರ್ಚಿಸಲು ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆಯಲ್ಲಿ ಬುಧವಾರ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ನಡೆದ ಸಭೆ ನಡೆಸಲಾಗಿದೆ. ಸಭೆಯಲ್ಲಿ ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸಲು ತೀರ್ಮಾನಿಸಲಾಗಿದೆ.
ಪಾಲಿಕೆಯ ವ್ಯಾಪ್ತಿಯಲ್ಲಿ ಫುಟ್ ಪಾತ್ ಮತ್ತು ವಾಹನಗಳು ಸಂಚರಿಸುವ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ವ್ಯಾಪಾರ ನಡೆಸುವ ಗೂಡಂಗಡಿಯ ವ್ಯಾಪಾರಸ್ಥರು ಈ ರಸ್ತೆ ಮತ್ತು ಫುಟ್ ಪಾತ್ ಗಳನ್ನು ಅತಿಕ್ರಮಿಸಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಮುಖ್ಯವಾಗಿ ಹಿರಿಯ ನಾಗರಿಕರಿಗೆ ತೊಂದರೆಯಾಗುತ್ತಿರುವ ಕುರಿತು ಹಲವು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಅನಧಿಕೃತ ಗೂಡಂಗಡಿಗಳನ್ನು ಪೋಲಿಸ್ ಇಲಾಖೆಯ ಸಹಾಯದಿಂದ ತುರ್ತಾಗಿ ತೆರವುಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಭೆಯಲ್ಲಿ ಉಪಮೇಯರ್, ಸ್ಥಾಯಿ ಸಮಿತಿಯ ಅಧ್ಯಕ್ಷರುಗಳು, ಆಯುಕ್ತ ಅಕ್ಷಯ್ ಶ್ರೀಧರ್ ಮತ್ತು ಪಾಲಿಕೆಯ ಕಂದಾಯ ಮತ್ತು ಆರೋಗ್ಯ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.