ಎರಡನೇ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಜಿಲ್ಲೆಗೆ ಪ್ರಥಮ ಸ್ಥಾನ: ಜಿಲ್ಲಾಧಿಕಾರಿ ಜೆ. ಮಂಜುನಾಥ್
Update: 2021-12-23 22:49 IST
ಬೆಂಗಳೂರು, ಡಿ.23: ಬೆಂಗಳೂರು ನಗರ ಜಿಲ್ಲೆಯು ಎರಡನೇ ಸುತ್ತಿನ ಲಸಿಕಾ ಅಭಿಯಾನದಲ್ಲಿ ಪ್ರಥಮ ಸ್ಥಾನದಲ್ಲಿದ್ದು, ಶೇ.100ರಷ್ಟು ಗುರಿಯನ್ನು ಸಾಧಿಸಿದ ಏಕೈಕ ಜಿಲ್ಲೆಯಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ತಿಳಿಸಿದರು.
ಗುರುವಾರ ನಗರದ ಕಂದಾಯ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮೊದಲ ಸುತ್ತಿನಲ್ಲಿ 13,26,255 ಜನರಿಗೆ ಲಸಿಕೆ ಹಾಕಲಾಗಿದ್ದು, ಶೇ. 100 ಸಾಧನೆಯಾಗಿದೆ. ಆರೋಗ್ಯ ಇಲಾಖೆಯ ವೈದ್ಯರು-ಸಿಬ್ಬಂದಿ, ಜಿಲ್ಲಾ ಪಂಚಾಯತ್, ಆಶಾ ಕಾರ್ಯಕರ್ತರು, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಮತ್ತಿತರ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಹಾಗೂ ಪ್ರತಿ ಗ್ರಾಮ ಪಂಚಾಯತಿಗಳ ಮನೆ ಮನೆಗೆ ಹೋಗಿ ಲಸಿಕೆ ಹಾಕಿಸಿದ ಕಾರಣ ಈ ಯಶಸ್ಸು ಸಾಧಿಸಲು ಸಾಧ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕೋವಿಡ್ ವಾರಿಯರ್‍ಗಳನ್ನು ಸನ್ಮಾನಿಸಲಾಯಿತು. ಅಪರ ಜಿಲ್ಲಾಧಿಕಾರಿ ಅನಿತಾ ಲಕ್ಷ್ಮಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.