ಅನುದಾನ ಬಿಡುಗಡೆಯಲ್ಲಿ ತಾರತಮ್ಯ: ಸಿಎಂ ನಿವಾಸದ ಮುಂದೆ ಧರಣಿ ಕೂರುವೆ ಎಂದ ದೇವೇಗೌಡ
ಬೆಂಗಳೂರು, ಡಿ. 31: ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವ ವಿಚಾರದಲ್ಲಿ ಅನುಸರಿಸುತ್ತಿರುವ ತಾರತಮ್ಯ ನೀತಿಯನ್ನು ಖಂಡಿಸಿ ಮುಖ್ಯಮಂತ್ರಿ ನಿವಾಸದ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಇಲ್ಲಿನ ದಾಸರಹಳ್ಳಿ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ಏನು ಮಾಡಿದೆ, ಬಿಜೆಪಿ ಏನು ಮಾಡಿದೆ ಹಾಗೂ ಜೆಡಿಎಸ್ ಏನು ಮಾಡಿದೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ. ದಾಸರಹಳ್ಳಿ ಕ್ಷೇತ್ರದ ಅಭಿವೃದ್ಧಿಗೆ ನಾನು ಹೋರಾಟ ಮಾಡುತ್ತೇನೆ ಎಂದು ಪ್ರಕಟಿಸಿದರು.
ಈ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಸಹಿಸದವರು ಪ್ರತಿಯೊಂದಕ್ಕೂ ಅಡ್ಡಿ ಮಾಡುತ್ತಿದ್ದಾರೆ. ಜನರ ಪರವಾಗಿ ಹೋರಾಟ ಮಾಡುತ್ತೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಹೋಗಿ ಅನುದಾನ ನೀಡುವಂತೆ ಮನವಿ ಮಾಡುತ್ತೇನೆ. ಒಂದು ವೇಳೆ ರಾಜಕೀಯ ಮಾಡಿದರೆ ಧರಣಿ ಕೂರುತ್ತೇನೆ ಎಂದು ಇದೇ ಸಂದರ್ಭದಲ್ಲಿ ದೇವೇಗೌಡ ಎಚ್ಚರಿಕೆ ನೀಡಿದರು.
ಮೇಕೆದಾಟು ಅಣೆಕಟ್ಟು ಯೋಜನೆ ಬಗ್ಗೆ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿರುವ ಬಗ್ಗೆ ನಾನು ಯಾವುದೇ ಕಾರಣಕ್ಕೂ ಲಘುವಾಗಿ ಮಾತನಾಡುವುದಿಲ್ಲ. ನ್ಯಾಯಕ್ಕಾಗಿ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇವೆ. ರಾಜ್ಯಕ್ಕೆ ಒಳಿತಾಗಬೇಕೆಂಬುದು ನಮ್ಮ ಉದ್ದೇಶ. ಆ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನ ಮಾಡಬೇಕಿದೆ ಎಂದು ದೇವೇಗೌಡ ಇದೇ ವೇಳೆ ಪ್ರತಿಕ್ರಿಯೆ ನೀಡಿದರು.