ಕಾಂಗ್ರೆಸ್ ನಿಂದ ಮೇಕೆದಾಟು ಯೋಜನೆ ಜಾರಿಗೆ ಪಾದಯಾತ್ರೆ: ಗಣ್ಯರ ಬೆಂಬಲ

Update: 2022-01-01 15:04 GMT

ಬೆಂಗಳೂರು, ಜ.1: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಜ.9 ರಿಂದ 19ರವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ರಾಜ್ಯಸಭೆಯ ವಿರೋಧ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಸೇರಿದಂತೆ ಇನ್ನಿತರ ಗಣ್ಯರು ಬೆಂಬಲಿಸಿದ್ದಾರೆ.

ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ಪಕ್ಷ ಮೇಕೆದಾಟಿನಿಂದ ಬೆಂಗಳೂರಿನ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ. ನಮ್ಮ ನೀರು, ನಮ್ಮ ಹಕ್ಕು ಎಂದು ಹೇಳಲು ತಾವೆಲ್ಲರೂ ಸಹ ಈ ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕಳಕಳಿಯಿಂದ ಕೇಳಿಕೊಳ್ಳುತ್ತೇನೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ಬೇರೆ ರಾಜ್ಯದ ಅನುಮತಿ ನಮಗೆ ಬೇಕಿಲ್ಲ. ಈ ಯೋಜನೆಯ ಮೂಲಕ ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು ಹಾಗೂ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಹಾಗೂ ನೀರಾವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ತಿಳಿಸಿದ್ದಾರೆ. 

ಮೇಕೆದಾಟು ಯೋಜನೆ ಸಮಸ್ತ ಕನ್ನಡಿಗರ ಯೋಜನೆ. ಈ ಯೋಜನೆ ಜಾರಿಗಾಗಿ ನಾವು ಹಿಂದೆಯೂ ಹೋರಾಟ ಮಾಡಿದ್ದೇವೆ, ಈಗಲೂ ಮಾಡುತ್ತೇವೆ. ಸರಕಾರ ತ್ವರಿತವಾಗಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಮೇಕೆದಾಟು ಪಾದಯಾತ್ರೆ ಹಮ್ಮಿಕೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಬೆಂಗಳೂರು ನಗರದ ನೀರಿನ ಬವಣೆಗೆ ಮೇಕೆದಾಟು ಯೋಜನೆ ಶಾಶ್ವತ ಪರಿಹಾರ ಒದಗಿಸಲಿದೆ. ಬನ್ನಿ, ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಮೂಲಕ ಯೋಜನೆ ಜಾರಿಗೆ ಒತ್ತಾಯಿಸೋಣ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಕರೆ ನೀಡಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮೇಕೆದಾಟು ಯೋಜನೆ ಜಾರಿ ಅತ್ಯಂತ ಅವಶ್ಯಕ. ಈ ಸಂಬಂಧ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರಗಳ ಮೇಲೆ ಒತ್ತಡ ಹೇರಲು ಜ.9 ರಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ನಾನೂ ಪಾಲ್ಗೊಳ್ಳಲಿದ್ದೇನೆ, ನೀವೂ ಸಹ ಭಾಗವಹಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News