ಕೋವಿಡ್ 3ನೇ ಅಲೆ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ನಿಯಮಗಳು: ಸಚಿವ ಅಶೋಕ್
Update: 2022-01-02 14:34 IST
ಬೆಂಗಳೂರು, ಜ.2: ಕೋವಿಡ್ ಮೂರನೇ ಅಲೆ ಬರುವ ಮುನ್ಸೂಚನೆಗಳು ಲಭಿಸುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.
ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ರವಿವಾರ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾತ್ರಿ ಕರ್ಫ್ಯೂ ಅವಧಿ ಮುಗಿಯುವ ಮುನ್ನವೇ ಮುಖ್ಯಮಂತ್ರಿ ನೇತೃತ್ವದಲ್ಲಿ ಮತ್ತೊಮ್ಮೆ ಸಭೆ ನಡೆಸಲಾಗುವುದು. ಕಠಿಣ ನಿಯಮ ಜಾರಿ ಕುರಿತು ಆ ಸಭೆಯಲ್ಲೇ ನಿರ್ಧಾರಕ್ಕೆ ಬರಲಾಗುವುದು ಎಂದರು.
ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಬೆಂಗಳೂರನ್ನು 'ರೆಡ್ ಝೋನ್' ಎಂದು ಕೇಂದ್ರ ಸರಕಾರ ಗುರುತಿಸಿದೆ. ನಗರದಲ್ಲಿ ಜನರ ಆರೋಗ್ಯ ರಕ್ಷಣೆಗೆ ಕಠಿಣವಾದ ನಿಯಮಗಳನ್ನು ಜಾರಿಗೊಳಿಸುವುದು ಅನಿವಾರ್ಯ ಎಂದು ಸಚಿವ ಅಶೋಕ್ ಹೇಳಿದರು.