ಲಾಕ್ ಡೌನ್ ಹೇರುವ ಅನಿವಾರ್ಯ ಪರಿಸ್ಥಿತಿಯನ್ನು ಸೃಷ್ಟಿಸಬಾರದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಳಗಾವಿ, ಜ. 2: ‘ಕೋವಿಡ್ ರೂಪಾಂತರಿ ಒಮೈಕ್ರಾನ್ ಸೋಂಕು ತಡೆಗಟ್ಟಲು ಮುಂಬೈ ಮಾದರಿಯಲ್ಲಿ ಬೆಂಗಳೂರು ನಗರದಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸುವ ಸಂಬಂಧ ಇನ್ನೂ ಎರಡು ದಿನಗಳಲ್ಲಿ ತಜ್ಞರ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ.
ರವಿವಾರ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕಫ್ರ್ಯೂ ವಿಸ್ತರಣೆ ಬಗ್ಗೆ ನಾಳೆ(ಜ.3) ಅಥವಾ ನಾಡಿದ್ದು ತೀರ್ಮಾನ ಮಾಡಲಾಗುವುದು. ಕೋವಿಡ್ ಸೋಂಕು ಯಾವ ರೀತಿಯಲ್ಲಿ ಹರಡುತ್ತಿದೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ವಿಶೇಷವಾಗಿ ಬೆಂಗಳೂರು ನಗರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೋಂಕು ಹಬ್ಬುತ್ತಿದೆ. ಇವೆಲ್ಲವನ್ನೂ ಗಮನಿಸಿ ತೀರ್ಮಾನ ಮಾಡುತ್ತೇವೆ' ಎಂದರು.
ಕಂದಾಯ ಸಚಿವ ಆರ್.ಅಶೋಕ್ ‘ಲಾಕ್‍ಡೌನ್' ಬಗ್ಗೆ ಮಾತನಾಡಿದ್ದಾರೆ. ಆದರೆ, ನಮ್ಮ ನಿಲುವು ಬಹಳ ಸ್ಪಷ್ಟ. ಈ ಹಿಂದೆ ಲಾಕ್‍ಡೌನ್ ಆಗಿತ್ತು. ಇದೀಗ ಮತ್ತೊಮ್ಮೆ ಲಾಕ್‍ಡೌನ್ ಆಗಬಾರದು ಎಂದು ಕಟ್ಟುನಿಟ್ಟಿನ ತೀರ್ಮಾನ ಕೈಗೊಂಡಿದ್ದೇವೆ. ಜನರು ಮಾರ್ಗಸೂಚಿ ಪಾಲಿಸುವ ಮೂಲಕ ಸಹಕಾರ ಕೊಟ್ಟರೆ ಲಾಕ್‍ಡೌನ್ ಆಗುವುದಿಲ್ಲ. ಸಚಿವ ಆರ್.ಅಶೋಕ್ ಹೇಳಿದ ಅರ್ಥವೇ ಇದು. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಬೊಮ್ಮಾಯಿ ಕೋರಿದರು.
ಗಡಿಯಲ್ಲಿ ಕಟ್ಟೆಚ್ಚರ: ಒಂದು ವಾರದಿಂದ ದೇಶದಲ್ಲಿ ಕೊರೋನ ಸೋಂಕು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಅದರಲ್ಲಿ ಒಮೈಕ್ರಾನ್ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿರುವುದನ್ನು ಗಮನಿಸುತ್ತಿದ್ದೇವೆ. ಮಹಾರಾಷ್ಟ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೋಂಕು ಬರುತ್ತಿವೆ. ಮುಂಬೈ ಜೊತೆ ಒಡನಾಟ ಹೆಚ್ಚಿದ್ದು, ರಾಜ್ಯದ ಗಡಿಯಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.
ಕೋವಿಡ್ ಎರಡು ಡೋಸ್ ಲಸಿಕೆ ಪಡೆದಿರಬೇಕು ಹಾಗೂ ಆರ್‍ಟಿಪಿಸಿಆರ್ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಕರ್ನಾಟಕ ರಾಜ್ಯಕ್ಕೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಬೆಳಗಾವಿ ಜೊತೆ ಅಕ್ಕ-ಪಕ್ಕದ ಚೆಕ್‍ಫೋಸ್ಟ್ ಬಿಗಿಗೊಳಿಸಲು ಸೂಚನೆ ನೀಡಲಾಗಿದೆ. ವಿಜಯಪುರ ಜಿಲ್ಲೆ ಸೇರಿ ಇನ್ನಿತರ ಗಡಿ ಪ್ರದೇಶಗಳಲ್ಲಿ ಚೆಕ್‍ಫೋಸ್ಟ್ ಮಾಡಿದ್ದಾರೆ. ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲಿಯೂ ಆಗಬೇಕು ಎಂದು ಅವರು ಸೂಚನೆ ನೀಡಿದರು.
ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ 11 ಚೆಕ್‍ಫೋಸ್ಟ್ ಗಳನ್ನು ಮಾಡಲಾಗಿದೆ. ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದರಿಂದ ಕೆಲ ಪ್ರಯಾಣಿಕರಿಗೆ ತೊಂದರೆ ಆಗಬಹುದು. ಆದರೆ, ಜನರ ಆರೋಗ್ಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ. ಇದು ಕೇವಲ ನಿಬರ್ಂಧ ಅಷ್ಟೇ ಅಲ್ಲ, ನಾವು ಪೂರ್ವ ತಯಾರಿ ಮಾಡಬೇಕಿದೆ ಎಂದರು.
ಈಗಾಗಲೇ ಕೋವಿಡ್ ಮೂರನೆ ಅಲೆ ಬರುವ ಮುನ್ಸೂಚನೆ ಹಿನ್ನೆಲೆಯಲ್ಲಿ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಹೆಚ್ಚುವರಿ ಬೆಡ್, 4 ಸಾವಿರಕ್ಕೂ ಹೆಚ್ಚು ಐಸಿಯು ಹಾಸಿಗೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಔಷಧಗಳನ್ನು ಸಂಗ್ರಹಿಸಿದ್ದು, ಎಲ್ಲ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಲಸಿಕಾ ಅಭಿಯಾನ: ನಾಳೆ(ಜ.3)ಯಿಂದ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಲಸಿಕಾಕರಣ ಕಾರ್ಯಕ್ರಮವನ್ನು ಯೋಜನಾ ಬದ್ಧವಾಗಿ, ಶಿಸ್ತಿನಿಂದ ಕಾರ್ಯಗತಗೊಳಿಸಲು ಸೂಚನೆ ನೀಡಲಾಗಿದೆ. ಮಕ್ಕಳನ್ನು ಸುರಕ್ಷಾ ಚಕ್ರದೊಳಗೆ ತರಲು ಪ್ರಧಾನಿ ಆಶಯದ ಈ ಕಾರ್ಯಕ್ರಮಕ್ಕೆ ಜ.3ರಂದು ಚಾಲನೆ ನೀಡಲಾಗುವುದು. ಜ.10ರಂದು ಕೊ-ಮಾರ್ಬಿಡಿಟಿ ಇರುವ ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟಿರುವ ವ್ಯಕ್ತಿಗಳಿಗೆ ಲಸಿಕಾಕರಣವನ್ನು ಮಾಡಲಾಗುವುದು ಎಂದು ತಿಳಿಸಿದರು.