ಮಡಿಕೇರಿ: ಕ್ರೈಸ್ತರ ಮೇಲಿನ ದೌರ್ಜನ್ಯ ಖಂಡಿಸಿ ಎಸ್‍ಡಿಪಿಐ ಪ್ರತಿಭಟನೆ

Update: 2022-01-03 13:13 GMT

ಮಡಿಕೇರಿ ಜ.3 : ಕ್ರೈಸ್ತರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.

ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಎಸ್‍ಡಿಪಿಐ ಕಾರ್ಯಕರ್ತರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ನಗರಸಭಾ ಸದಸ್ಯ ಅಮೀನ್ ಮೊಹಿಸಿನ್ ಮಾತನಾಡಿ, ದೇಶದಲ್ಲಿ ಕ್ರಿಶ್ಚಿಯನ್ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡನೀಯವೆಂದರು. 

ಕ್ರಿಶ್ಚಿಯನ್ ಸೇರಿದಂತೆ ಎಲ್ಲಾ ಅಲ್ಪಸಂಖ್ಯಾತರ ಮೇಲೆ ಸಂಘ ಪರಿವಾರ ನಡೆಸುತ್ತಿರುವ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಘಟನೆಗಳು ಮರುಕಳುಸುತ್ತಿದೆ ಎಂದು ಆರೋಪಿಸಿದರು. 

ರಾಜ್ಯ ಸರಕಾರ ಮಂಡಿಸಿರುವ ಮತಾಂತರ ನಿಷೇಧ ಮಸೂದೆ ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಟೀಕಿಸಿರುವ ಅವರು ಕಾಯ್ದೆಯನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು.

ಪಕ್ಷದ ಜಿಲ್ಲಾಧ್ಯಕ್ಷ ಮುಸ್ತಫ ಮಡಿಕೇರಿ ಮಾತನಾಡಿ, ದೇಶದ ಶಾಂತಿ ಮತ್ತು ಸೌಹಾರ್ದತೆಯನ್ನು ಕದಡುತ್ತಿರುವ ಶಕ್ತಿಗಳ ವಿರುದ್ಧ ಜನ ಒಗ್ಗೂಡಬೇಕೆಂದು ಕರೆ ನೀಡಿದರು.

 ಪ್ರಮುಖರಾದ ಫಾದರ್ ಜೆರಾಲ್ಡ್ ಸಿಕ್ವೇರಾ, ಜಾರ್ಜ್ ಲಾಸ್ರಾಡೋ, ವಿಜು ಮಡಿಕೇರಿ, ಮೈಕಲ್ ವೇಗಸ್, ಅಬ್ದುಲ್ಲಾ, ನಗರಸಭಾ ಸದಸ್ಯರಾದ ಮೇರಿ ವೇಗಸ್, ಮನ್ಸೂರ್, ಬಶೀರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News