×
Ad

4 ದಿನಗಳಲ್ಲಿ ಉಡುಪಿ ಜಿಲ್ಲೆಯ 60,000 ಮಕ್ಕಳಿಗೆ ಲಸಿಕೆ ನೀಡುವ ಗುರಿ: ಶಾಸಕ ರಘುಪತಿ ಭಟ್

Update: 2022-01-03 19:08 IST

ಉಡುಪಿ, ಜ.3: ಜಿಲ್ಲೆಯಲ್ಲಿ 15ರಿಂದ 18 ವರ್ಷದೊಳಗಿನ ಸುಮಾರು 60,000 ಮಕ್ಕಳಿದ್ದು, ಪ್ರತಿದಿನ 17ಸಾವಿರ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಮೂಲಕ ಮುಂದಿನ ನಾಲ್ಕು ದಿನಗಳಲ್ಲಿ ಗುರಿ ಸಾಧಿಸಲು ಯೋಜಿಸ ಲಾಗಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

ಉಡುಪಿ ನಿಟ್ಟೂರು ಪ್ರೌಢಶಾಲೆಯಲ್ಲಿ ಸೋಮವಾರ ನಡೆದ 15 ರಿಂದ 18 ವರ್ಷಗೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಈಗಾಗಲೇ 18 ವರ್ಷ ಮೇಲ್ಪಟ್ಟರಿಗೆ ಮೊದಲನೇ ಡೋಸ್ ಕೋವಿಡ್ ಲಸಿಕೆಯನ್ನು ಶೇ.96.3 ಹಾಗೂ ಎರಡು ಡೋಸ್‌ಗಳನ್ನು ಶೇ.84.3 ನೀಡಲಾಗಿದೆ. ಪ್ರಸ್ತುತ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದ್ದು, ಇದು ಅತ್ಯಂತ ಸುರಕ್ಷಿತವಾಗಿದೆ. ಯಾರು ಕೂಡ ಆತಂಕ ಪಡದೆ ಲಸಿಕೆಯನ್ನು ಪಡೆದು ಕೊಳ್ಳಬೇಕು. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗ ಬೇಕು. ಪೋಷಕರು ಸಹ ಈ ಕಾರ್ಯಕ್ರಮಕ್ಕೆ ಸಹಕರಿಸಬೇಕು. ಮುಂದಿನ ದಿನಗಳಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಕೂಡ ಲಸಿಕೆ ಬರಲಿದೆ ಎಂದರು.

ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಸ್ವಲ್ಪಪ್ರಮಾಣದಲ್ಲಿ ಹೆಚ್ಚಾಗು ತ್ತಿದ್ದು, ಕೋವಿಡ್ ಹರಡುವುದನ್ನು ನಿಯಂತ್ರಿಸಲು ಎಲ್ಲರೂ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆಯುವುದು, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಮಾಡಬೇಕಾಗಿದೆ. ಪರ್ಯಾಯ ಮಹೋತ್ಸವ ಕಾರ್ಯಕ್ರಮ ದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆಯಲೇ ಬೇಕು ಎಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಮಾಸ್ಕ್, ಸುರಕ್ಷಿತ ಅಂತರ, ಕೈತೋಳೆಯುವುದರ ಜೊತೆಗೆ ಲಕ್ಷ್ಮಣಗಳು ಕಂಡುಬಂದರೆ ಕೊರೋನಾ ಪರೀಕ್ಷೆ ಮತ್ತು ಲಸಿಕೆ ಪಡೆದುಕೊಳ್ಳುವ ಪಂಚಸೂತ್ರಗಳನ್ನು ಎಲ್ಲರು ಪಾಲಿಸಿದರೆ ಉಡುಪಿಯನ್ನು ಕೊರೋನಾ ಮುಕ್ತ ಜಿಲ್ಲೆಯನ್ನಾಗಿ ಮಾಡಬಹುದಾಗಿದೆ. ಮಕ್ಕಳು ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್‌ನಿಂದ ಸಂಪೂರ್ಣ ಸುರಕ್ಷೆ ಪಡೆಯಲಿದ್ದು, ಭೌತಿಕವಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯ ವಾಗಲಿದೆ. ಇದಕ್ಕೆ ಶಿಕ್ಷಕರ ಜೊತೆ ಪೋಷಕರ ಸಹಕಾರ ಕೂಡ ಅಗತ್ಯವಾಗಿದೆ ಎಂದು ತಿಳಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ನಗರಸಭಾ ಸದಸ್ಯ ಗಿರಿಧರ ಆಚಾರ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ನಿಟ್ಟೂರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಅನುಸೂಯ ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News