×
Ad

ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

Update: 2022-01-03 22:58 IST

ಬೆಂಗಳೂರು, ಜ.3: ಪರವಾನಗಿ ನವೀಕರಿಸದೆ ರಿವಾಲ್ವರ್ ಇಟ್ಟುಕೊಂಡಿದ್ದಕ್ಕೆ ಬಳ್ಳಾರಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಶಸ್ತ್ರಾಸ್ತ ಕಾಯ್ದೆ ಅಡಿ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಶಾಸಕ ಸೋಮಶೇಖರ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿ ತಿರಸ್ಕರಿಸಿ ಆದೇಶಿಸಿದೆ.

ಬಳ್ಳಾರಿ ಶಾಸಕ ಜಿ. ಸೋಮಶೇಖರ ರೆಡ್ಡಿ 2009ರ ಡಿ.31 ರಿಂದ 2011ರ ನ.10 ರವರೆಗೆ ಪರವಾನಗಿ ನವೀಕರಿಸದೆ ರಿವಾಲ್ವರ್ ಇರಿಸಿಕೊಂಡಿದ್ದರು. ಈ ಆರೋಪದಡಿ ಅಮ್‍ಲಾನ್ ಆದಿತ್ಯ ಬಿಸ್ವಾಸ್ ಎಂಬುವರು ಬಳ್ಳಾರಿ ಎಸ್ಪಿಗೆ 2012ರಲ್ಲಿ ಪತ್ರ ಬರೆದಿದ್ದರು.

ಈ ಪತ್ರ ಆಧರಿಸಿ ಬಳ್ಳಾರಿ ಗ್ರಾಮಾಂತರ ಪೊಲೀಸರು ಸೋಮಶೇಖರ ರೆಡ್ಡಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಸೆಕ್ಷನ್ 21(1)(ಬಿ) ಅಡಿಯಲ್ಲಿ ಎಫ್‍ಐಆರ್ ದಾಖಲಿಸಿ, ಅನಧಿಕೃತವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 

ಪ್ರಕರಣ ಸದ್ಯ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಪ್ರಕರಣವನ್ನು ರದ್ದುಪಡಿಸುವಂತೆ ಕೋರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈಗಾಗಲೇ ಪ್ರಕರಣದ ತನಿಖೆ ಪೂರ್ಣಗೊಂಡು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ವಿಚಾರಣಾ ನ್ಯಾಯಾಲಯ ಪ್ರಕರಣ ವಿಚಾರಣೆ ನಡೆಸುತ್ತಿರುವ ಹಂತದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News