×
Ad

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮನೆಗೆ ಮುತ್ತಿಗೆ

Update: 2022-01-04 14:56 IST

ಬೆಂಗಳೂರು : ಬೆಂಗಳೂರು ಮಹಾನಗರದ ಕೇಂದ್ರ, ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ವೈಯಾಲಿ ಕಾವಲ್‍ನಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರ ಮನೆಗೆ ಮುತ್ತಿಗೆ ಹಾಕಲಾಯಿತು.

ಸಂಸದ ಡಿ.ಕೆ.ಸುರೇಶ್ ಮತ್ತು ವಿಧಾನ ಪರಿಷತ್ ಸದಸ್ಯರು, ಸಚಿವ ಡಾ.ಅಶ್ವತ್ಥನಾರಾಯಣ ಅವರ ಮೇಲೆ ಹಲ್ಲೆಗೆ ಯತ್ನಿಸಿ, ಮೈಕ್ ಕಸಿದು, ತಳ್ಳಾಟ ನಡೆಸಿ ಅಮಾನವೀಯವಾಗಿ ವರ್ತಿಸಿದ್ದಾರೆ. ಅಲ್ಲದೆ, ಅಸಭ್ಯ ಹಾಗೂ ಗೂಂಡಾ ವರ್ತನೆ ತೋರಿದ್ದಾರೆ. ಇದನ್ನು ಖಂಡಿಸಿ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿರುವುದಾಗಿ ತಿಳಿಸಿದ್ದು, ಮನೆಗೆ ಮುತ್ತಿಗೆ ಹಾಕಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಯುವ ಮೋರ್ಚಾ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ದಶರಥ್, ಯುವ ಮೋರ್ಚಾ ರಾಜ್ಯ ಕೋಶಾಧ್ಯಕ್ಷರಾದ ಅನಿಲ್ ಶೆಟ್ಟಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಎಸ್.ವಿ. ವಿನೋದ್‍ಕುಮಾರ್, ಯುವ ಮೋರ್ಚಾ ಅಧ್ಯಕ್ಷರಾದ ಪ್ರಶಾಂತ್ ಗೌಡ, (ಬೆಂಗಳೂರು ಉತ್ತರ ಜಿಲ್ಲೆ) ಅಭಿಲಾಷ್ ರೆಡ್ಡಿ (ಬೆಂಗಳೂರು ಕೇಂದ್ರ ಜಿಲ್ಲೆ) ಮತ್ತು ಪುನೀತ್ ರೆಡ್ಡಿ (ಬೆಂಗಳೂರು ದಕ್ಷಿಣ ಜಿಲ್ಲೆ) ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಕಾಂಗ್ರೆಸ್ಸಿಗರ ಗೂಂಡಾ ವರ್ತನೆಯು ಖಂಡನೀಯ. ಇದರ ವಿರುದ್ಧ ಮುಂದಿನ ದಿನಗಳಲ್ಲಿ ರಾಮನಗರ ಚಲೋ ಹಮ್ಮಿಕೊಳ್ಳುವುದಾಗಿ ಪ್ರಶಾಂತ್ ಗೌಡ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News