×
Ad

ಉಡುಪಿ ಜಿಲ್ಲೆಯಾದ್ಯಂತ ಕೋವಿಡ್-19 ಕುರಿತು ಜಾಗೃತಿಗೆ ಕ್ರಮ: ಡಿಸಿ ಸೂಚನೆ

Update: 2022-01-04 21:06 IST

ಉಡುಪಿ, ಜ.4: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಕೋವಿಡ್-19ರ ಕುರಿತು ಜಾಗೃತಿ ಮೂಡಿಸುವ ಚಟುವಟಿಕೆ ಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಂದು ಉಡುಪಿಯ ಸರ್ವೇಕ್ಷಣಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಅಬಕಾರಿ ಇಲಾಖೆ, ಕಂದಾಯ ಇಲಾಖೆ, ಪೋಲೀಸ್ ಇಲಾಖೆ, ಮೀನುಗಾರಿಕೆ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಸಾರಿಗೆ ಇಲಾಖೆ, ಎಪಿಎಂಸಿ, ಧಾರ್ಮಿಕ ದತ್ತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಕೋವಿಡ್-19 ಕುರಿತು ಜನ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ಜನವರಿ 5ರಂದು ಸಂಜೆ 5ರಿಂದ 6ರವರೆಗೆ ಕಟ್ಟುನಿಟ್ಟಾಗಿ ಆಯೋಜಿಸಲು ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಓಡಾಡುವವರು, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಇರುವವರು, ರಸ್ತೆಯಲ್ಲಿ ಹಾಗೂ ಸಿಕ್ಕ ಸಿಕ್ಕ ಕಡೆ ಉಗುಳುವವರನ್ನು ಗುರುತಿಸಿ ಅವರಿಗೆ ಎಚ್ಚರಿಕೆ ನೀಡುವುದು, ಕೋವಿಡ್- 19ರ ಮಾರ್ಗಸೂಚಿ ಉಲ್ಲಂಸುವ ಸಾರ್ವಜನಿಕರನ್ನು ಗುರುತಿಸಿ ಸರಕಾರ ನಿಗದಿ ಪಡಿಸಿದ ರೀತಿಯಲ್ಲಿ ದಂಡ ವಿಧಿಸಿ ಕೊರೋನಾ ಕುರಿತು ಜನ ಜಾಗೃತಿ ಮೂಡಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಡಿಎಚ್‌ಓ ಡಾ.ನಾಗಭೂಷಣ ಉಡುಪ, ಜಿಪಂ ಉಪಕಾರ್ಯದರ್ಶಿ ಕಿರಣ್ ಪೆಡ್ನೆಕರ್, ಆರೋಗ್ಯ ಇಲಾಖೆ ಮತ್ತು ವಿವಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News