`ಎನ್‍ಇಪಿ' ಪೂರ್ವ ಪ್ರಾಥಮಿಕ, ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಕಡ್ಡಾಯ: ಸಚಿವ ಬಿ.ಸಿ.ನಾಗೇಶ್

Update: 2022-01-07 11:20 GMT

ಬೆಂಗಳೂರು, ಜ. 7: `ರಾಷ್ಟ್ರೀಯ ನೂತನ ಶಿಕ್ಷಣ ನೀತಿ(ಎನ್‍ಇಪಿ) ಅನ್ವಯ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಕಡ್ಡಾಯಗೊಳಿಸಲಾಗುವುದು. ಕನ್ನಡವನ್ನು ಒಂದು ಭಾಷೆಯನ್ನಾಗಿ ಕಡ್ಡಾಯವಾಗಿ ಎಲ್ಲ ಖಾಸಗಿ ಶಾಲೆಗಳು ಕಲಿಸುವಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಶುಕ್ರವಾರ ಪೂರ್ವ ಪ್ರಾಥಮಿಕ ಶಿಕ್ಷಣ, ಅಂಗನವಾಡಿ ಹಾಗೂ ಪ್ರಾಥಮಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಭಾಷಾ ಶಿಕ್ಷಣದ ರೂಪುರೇಷೆಗಳ ಕುರಿತ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎನ್‍ಇಪಿ ಪಠ್ಯಕ್ರಮಕ್ಕೆ ಅನುಗುಣವಾಗಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲೆಗಳನ್ನು ಕನ್ನಡಮಯವಾಗಿಸಲು ಸಂಬಂಧಪಟ್ಟವರೊಂದಿಗೆ ಸಭೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಮಾತನಾಡಿ, `ಭಾಷೆಯನ್ನು ಇನ್ನೂ ತಿಳಿಯದ ಮಕ್ಕಳಿಗೆ ಒತ್ತಾಯಪೂರ್ವಕವಾಗಿ ಮಗುವಿನ ಪರಿಸರದ ಭಾಷೆಯ ಬದಲಿಗೆ ಅನ್ಯ ಭಾಷೆಯನ್ನು ಹೇರುವುದು ಸರಿಯಾದ ಕ್ರಮವಲ್ಲ. 3 ವರ್ಷದಿಂದ 6 ವರ್ಷದೊಳಗಿನ ಮಕ್ಕಳಿಗೆ ರಾಜ್ಯದ ಪರಿಸರದ ಭಾಷೆಯಲ್ಲಿ ಶಿಕ್ಷಣ ನೀಡುವುದರಿಂದ ಮಕ್ಕಳು ನಮ್ಮ ನೆಲದ ಸಂಸ್ಕøತಿಯಿಂದ ಬೇರೆಡೆಗೆ ವಲಸೆ ಹೋಗುವುದು ತಪ್ಪುವುದರೊಂದಿಗೆ ಕನ್ನಡ ನುಡಿ, ನಾಡಿನ ಸಂಸ್ಕೃತಿಯು ಉಳಿಯಲಿದೆ' ಎಂದರು.

`ಬಾಲ್ಯದಲ್ಲಿಯೇ ಮಕ್ಕಳಿಗೆ ಅನ್ಯಭಾಷೆಯ ಮೂಲಕ ಮತ್ತೊಂದು ಸಂಸ್ಕೃತಿಯನ್ನು ಒತ್ತಾಯಪೂರ್ವಕವಾಗಿ ಹೇರಿದರೆ ಮಕ್ಕಳು ಈ ನೆಲಮೂಲದ ಸಂಸ್ಕೃತಿಯನ್ನು ಮರೆತು ಹೋಗುವ ಸಾಧ್ಯತೆ ಹೆಚ್ಚಿರುತ್ತದೆ. ಇದರಿಂದಾಗಿ ಮುಂದೊಂದು ದಿನ ಕನ್ನಡ ನಾಡು-ನುಡಿಯ ಸಂಸ್ಕೃತಿಯು ಕಣ್ಮರೆಯಾಗುವ ಅಪಾಯವಿರುತ್ತದೆ. ಅಂಗನವಾಡಿ, ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಕಲಿಸಲು ಮೊದಲ ಆದ್ಯತೆ ನೀಡಬೇಕು ಎಂದು ಅವರು ನುಡಿದರು.

ಕಡ್ಡಾಯವಾಗಬೇಕು: `ಕರ್ನಾಟಕದಲ್ಲಿ ಕನ್ನಡ ಕಡ್ಡಾಯವಾಗಿರಬೇಕೆ ಹೊರತು ಆಯ್ಕೆಯಾಗಬಾರದು. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮ ವಹಿಸಬೇಕು. ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವ ನಿಟ್ಟಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸೂಕ್ತ ಕ್ರಮಗಳನ್ನು ಜಾರಿಗೊಳಿಸಬೇಕು. ಕನ್ನಡವನ್ನು ಕಡ್ಡಾಯವಾಗಿ ಬೋಧಿಸದಿರುವ ಖಾಸಗಿ ಶಾಲೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು. ಆಗ ಮಾತ್ರ ಕನ್ನಡ ಭಾಷೆ ಉಳಿಯಲು ಸಾಧ್ಯ. ಸಿಬಿಎಸ್‍ಇ, ಐಸಿಎಸ್‍ಇ ಹಾಗೂ ಖಾಸಗಿ ಶಾಲೆಗಳ ಒತ್ತಡಕ್ಕೆ ಮಣಿದು ಸರಕಾರಿ ಶಾಲೆಗಳಲ್ಲಿಯೂ ಇಂಗ್ಲಿಷ್ ಮಾಧ್ಯಮ ಅನುಷ್ಠಾನಕ್ಕೆ ಮುಂದಾಗಬಾರದು. ಸಿಬಿಎಸ್‍ಇ, ಐಸಿಎಸ್‍ಇ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡದ ಪರಿಸರ ಸೃಷ್ಟಿಸುವ ರೀತಿಯಲ್ಲಿ ಶಿಕ್ಷಣ ಇಲಾಖೆ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.

ಸರಕಾರಿ ಶಾಲೆಗಳ ಪಕ್ಕದಲ್ಲಿಯೇ ಖಾಸಗಿ ಶಾಲೆಗಳನ್ನು ತೆರೆಯಲು ಅನುಮತಿ ನೀಡುವುದರಿಂದ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಲಿದೆ. ಇದರಿಂದ ಸರಕಾರಿ ಶಾಲೆಯನ್ನು ಮುಚ್ಚುವ ಸ್ಥಿತಿ ನಿರ್ಮಾಣವಾಗುತ್ತದೆ. ಹೀಗಾಗಿ ಖಾಸಗಿ ಶಾಲೆಗಳನ್ನು ತೆರೆಯಲು ಅನುಮತಿ ನೀಡುವಾಗ ಅದರ ಆಸುಪಾಸಿನಲ್ಲಿ ಯಾವುದೇ ಸರಕಾರಿ ಶಾಲೆಗಳು ಇಲ್ಲದಿರುವುದನ್ನು ಅಧಿಕಾರಿಗಳು ಸ್ಪಷ್ಟಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕನ್ನಡ ಕಲಿಕಾ ಅಧಿನಿಯಮ-2015 ಅನ್ನು ಪಾಲಿಸುವ ನಿಟ್ಟಿನಲ್ಲಿ ಖಾಸಗಿ ಶಾಲೆಗಳಿಗೆ 2015ರಿಂದ ನೀಡಿರುವ ಎನ್‍ಓಸಿ ಆರ್‍ಆರ್‍ಗಳನ್ನು ಹಾಗೂ ಎನ್‍ಓಸಿಗಳನ್ನು ನೀಡಲು ಇರುವ ಮಾನದಂಡಗಳು ಮತ್ತು ಈಗ ಎನ್‍ಓಸಿಗಳನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಿರುವ ಶಾಲೆಗಳ ಪಟ್ಟಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ನೀಡಬೇಕು ಎಂದು ಅವರು ಹೇಳಿದರು. ಐಸಿಡಿಎಸ್‍ನ ಜಂಟಿ ನಿರ್ದೇಶಕಿ ಡಾ.ಬಿ.ಉಷಾ, ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೋಟ್ರೆಶ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News