ಉಡುಪಿ ಜಿಲ್ಲೆಯಲ್ಲಿ 148 ಮಂದಿಯಲ್ಲಿ ಕೋವಿಡ್ ಪಾಸಿಟಿವ್
ಉಡುಪಿ, ಜ.7: ಜಿಲ್ಲೆಯಲ್ಲಿ ನಾಲ್ಕು ತಿಂಗಳ ಬಳಿಕ ಕೊರೋನ ಪಾಸಿಟಿವ್ ಪ್ರಕರಣ ಮತ್ತೆ 100ರ ಗಡಿ ದಾಟಿದೆ. ಕಳೆದ ಸೆ.16ರ ಬಳಿಕ ಮೊದಲ ಬಾರಿ ಇಂದು ಜಿಲ್ಲೆಯಲ್ಲಿ 148 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ಅಲ್ಲದೇ ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆಯೂ 500ರ (558) ಗಡಿ ದಾಟಿ ಮುನ್ನಡೆದಿದೆ. ಶುಕ್ರವಾರ 17 ಮಂದಿ ಸೋಂಕಿನಿಂದ ಗುಣಮುಖ ರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ದಿನದಲ್ಲಿ ಪಾಸಿಟಿವ್ ಬಂದ 148 ಮಂದಿಯಲ್ಲಿ 71 ಮಂದಿ ಪುರುಷರಾದರೆ 77 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 125 ಮಂದಿ ಉಡುಪಿ ತಾಲೂಕಿಗೆ ಸೇರಿದವರಾದರೆ ಕುಂದಾಪುರ ತಾಲೂಕಿನ 9 ಮಂದಿ ಹಾಗೂ ಕಾರ್ಕಳ ತಾಲೂಕಿನ 14 ಮಂದಿಯೂ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ 10 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಉಳಿದ 138 ಮಂದಿಗೆ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಗುರುವಾರ 17 ಮಂದಿ ರೋಗದಿಂದ ಗುಣಮುಖರಾಗುವ ಮೂಲಕ ಕೊರೋನದಿಂದ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 76,611ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 6005 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 77,648ಕ್ಕೇರಿದೆ. ಇಂದು ಸಹ ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ.
5243 ಮಂದಿಗೆ ಲಸಿಕೆ: ಉಡುಪಿ ಜಿಲ್ಲೆಯಲ್ಲಿ ಇಂದು ಒಟ್ಟು 5243 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 2188 ಮಂದಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ಕೋವ್ಯಾಕ್ಸಿನ್ ನೀಡಲಾಗಿದೆ. ಒಟ್ಟಾರೆಯಾಗಿ ದಿನದಲ್ಲಿ 3048 ಮಂದಿ ಮೊದಲ ಡೋಸ್ ಹಾಗೂ 2195 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿ ದ್ದಾರೆ ಎಂದು ಡಿಎಚ್‌ಓ ಡಾ.ಉಡುಪ ತಿಳಿಸಿದ್ದಾರೆ.
ಇಂದು ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 727 ಮಂದಿ ಮೊದಲ ಡೋಸ್ ಹಾಗೂ 1476 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 133 ಮಂದಿ ಮೊದಲ ಡೋಸ್ ಹಾಗೂ 712 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ನಾಲ್ವರು ಆರೋಗ್ಯ ಹಾಗೂ ಮೂವರು ಮುಂಚೂಣಿ ಕಾರ್ಯಕರ್ತರೂ ಎರಡನೇ ಡೋಸ್ ಲಸಿಕೆ ಸ್ವೀಕರಿಸಿದ್ದಾರೆ.
ಶೇ.59.5 ಸಾಧನೆ: ಜಿಲ್ಲೆಯಲ್ಲಿ ಒಟ್ಟಾರೆ 53,555 ಮಂದಿ 15ರಿಂದ 18ವರ್ಷದೊಳಗಿನ ಮಕ್ಕಳಿಗೆ ಲಸಿಕೆಯನ್ನು ನೀಡುವ ಗುರಿ ಇದ್ದು, ಇಂದು ಸಂಜೆಯವರೆಗೆ 31,880 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ. ಈ ಮೂಲಕ ಒಟ್ಟಾರೆಯಾಗಿ ಶೇ.59.5ರಷ್ಟು ವಿದ್ಯಾರ್ಥಿಗಳು ಮೊದಲ ಡೋಸ್ ಲಸಿಕೆ ಪಡೆದಂತಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.