ದ.ಕ.ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಆರೋಪ : 625 ಪ್ರಕರಣ ದಾಖಲು
ಮಂಗಳೂರು, ಜ.8: ಕೋವಿಡ್ ನಿಯಂತ್ರಿಸುವ ಸಲುವಾಗಿ ರಾಜ್ಯ ಸರಕಾರ ಜಾರಿಗೊಳಿಸಿದ್ದ ವೀಕೆಂಡ್ ಕರ್ಫ್ಯೂ ಉಲ್ಲಂಘಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ.ಜಿಲ್ಲೆಯಲ್ಲಿ 625 ಪ್ರಕರಣಗಳು ದಾಖಲಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್ ನಿಯಮ ಹಾಗೂ ಮೋಟಾರು ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 517 ಪ್ರಕರಣ ದಾಖಲಾಗಿದೆ. ಮಾಸ್ಕ್ ಧರಿಸದ 369 ಪ್ರಕರಣವಲ್ಲದೆ 110ಕ್ಕೂ ಅಧಿಕ ವಾಹನಗಳನ್ನು ಮುಟ್ಟುಗೋಲು ಹಾಕಿ ಬಳಿಕ ದಂಡ ವಿಧಿಸಿ ಬಿಡುಗಡೆ ಮಾಡಲಾಗಿದೆ. ಕಮಿಷನರೇಟ್ ವ್ಯಾಪ್ತಿಯ ಗಡಿ ಭಾಗದ 5 ಸಹಿತ ಒಟ್ಟು 32 ಕಡೆ ನಾಕಾಬಂಧಿ ಹಾಕಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ದ.ಕ. ಜಿಲ್ಲಾ ಎಸ್ಪಿ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ 108 ಪ್ರಕರಣ, ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಡಿ 10 ವಾಹನಗಳನ್ನು ಮುಟ್ಟುಗೊಲು ಹಾಕಲಾಗಿದೆ ಎಂದು ತಿಳಿಸಿದ್ದಾರೆ.
ಎರಡು ಉದ್ದಿಮೆ ಪರವಾನಿಗೆ ರದ್ದು
ಕೋವಿಡ್ 19 ರೂಪಾಂತರಿ ಒಮೈಕ್ರಾನ್ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರಕಾರದ ಆದೇಶದಂತೆ ಶನಿವಾರ ಜಾರಿಗೊಳಿಸಲಾದ ವೀಕೆಂಡ್ ಕರ್ಫ್ಯೂ ಸಂದರ್ಭ ಮಾರ್ಗಸೂಚಿಯನ್ನು ಉಲ್ಲಂಘಿಸಿ ವ್ಯಾಪಾರ ನಡೆಸುತ್ತಿದ್ದ ನಗರದ ಎರಡು ಅಂಗಡಿಗಳ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲಾಗಿದೆ.
ಪಾಲಿಕೆಯ ಆರೋಗ್ಯ ಮತ್ತು ಕಂದಾಯ ವಿಭಾಗದ ಅಧಿಕಾರಿಗಳು ಶನಿವಾರ ನಗರದ ತಪಾಸಣೆ ನಡೆಸಿದ ವೇಳೆ ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ 43 ಪ್ರಕರಣಗಳಿಗೆ 12,100 ರೂ.ವನ್ನು ದಂಡವನ್ನು ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.