ಮೇಕೆದಾಟು ಪಾದಯಾತ್ರೆ: ಸಿದ್ದರಾಮಯ್ಯ, ಡಿಕೆಶಿ ಸಹಿತ 30 ಮಂದಿ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು, ಜ.10: ಮೇಕೆದಾಟು ಅಣೆಕಟ್ಟು ಯೋಜನೆಯ ತ್ವರಿತ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ರವಿವಾರದಿಂದ ಹಮ್ಮಿಕೊಂಡಿರುವ ಪಾದಯಾತ್ರೆ ವೇಳೆ ವಾರಾಂತ್ಯ ಕರ್ಫ್ಯೂ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ 30 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರಾಜ್ಯದಲ್ಲಿ ಒಮೈಕ್ರಾನ್ ಹಾಗೂ ಕೋವಿಡ್ ಪಾಸಿಟಿವ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಸರಕಾರವು ಶುಕ್ರವಾರ ರಾತ್ರಿಯಿಂದ ಸೋಮವಾರ ಮುಂಜಾನೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿತ್ತು. ವಾರಾಂತ್ಯ ಕರ್ಫ್ಯೂ ನಡುವೆಯೇ ಮೇಕೆದಾಟು ಪಾದಯಾತ್ರೆಗೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಸಮೀಪದ ಸಂಗಮದಲ್ಲಿ ರವಿವಾರ ಚಾಲನೆ ನೀಡಲಾಗಿತ್ತು. ಪಾದಯಾತ್ರೆ ವೇಳೆ ವೀಕೆಂಡ್ ಕರ್ಫ್ಯೂ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಲ್ಲಿ ಸಾತನೂರು ಪೊಲೀಸ್ ಠಾಣೆಯಲ್ಲಿ ಮಾಜಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ 30 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
30 ಮಂದಿಯ ವಿರುದ್ಧ ಐಪಿಸಿ ಸೆಕ್ಷನ್ 141, 143, 290 ಹಾಗೂ 336 ಕಲಂ ಅಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಈ ನಡುವೆ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ದೊಡ್ಡಾಲಹಳ್ಳಿಯಿಂದ ನಡಿಗೆ ಆರಂಭಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ಸ್ವಗ್ರಾಮವೂ ಆದ ದೊಡ್ಡಾಲಹಳ್ಳಿಯಿಂದ ಕನಕಪುರ ಕಡೆಗೆ ಪಾದಯಾತ್ರಿಗರು ಹೆಜ್ಜೆ ಇಟ್ಟಿದ್ದು, ಕಾಂಗ್ರೆಸ್ ನ ಅನೇಕ ನಾಯಕರು ಸಾಥ್ ನೀಡಿದ್ದಾರೆ. ಈ ದಿನ ಒಟ್ಟು 15 ಕಿ.ಮೀ. ಕ್ರಮಿಸಲಿದ್ದಾರೆ.