×
Ad

ಬೋವಿ ಜನಾಂಗಕ್ಕೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡಲು ಪರಿಶೀಲನೆ -ಸಚಿವ ಕೋಟ

Update: 2022-01-10 19:42 IST

ಉಡುಪಿ, ಜ.10: ಜಿಲ್ಲೆಯಲ್ಲಿ ಬೋವಿ ಜನಾಂಗದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ಇರುವ ಸಮಸ್ಯೆಗಳ ಬಗ್ಗೆ ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳ ಸಭೆಯು, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಮಣಿಪಾಲದ ಜಿಪಂ ಸಭಾಂಗಣದಲ್ಲಿ ನಡೆಯಿತು.

ಬೋವಿ ಜನಾಂಗಕ್ಕೆ ಪ.ಜಾತಿ ಪ್ರಮಾಣ ಪತ್ರ ನೀಡಲು ಪ್ರಸ್ತುತ ಇರುವ ಸಮಸ್ಯೆಗಳು ಮತ್ತು ಗೊಂದಲಗಳು ಹಾಗೂ ಇವುಗಳ ನಿವಾರಣೆಗೆ ಅನುಸರಿಸ ಬಹುದಾದ ಮಾರ್ಗಗಳ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಸಲ್ಲಿಸುವಂತೆ ಸೂಚಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಈ ಪ್ರಸ್ತಾವನೆಯನ್ನು ಪರಿಶೀಲಿಸಿ, ಈ ಜನಾಂಗಕ್ಕೆ ಪ.ವರ್ಗದ ಪ್ರಮಾಣ ಪತ್ರ ನೀಡುವ ಕುರಿತಂತೆ ಸರಕಾರದ ಮಟ್ಟದಲ್ಲಿ ಚರ್ಚಿಸಿ, ಪ್ರಮಾಣ ಪತ್ರ ನೀಡಲು ಪರಿಗಣಿಸಬಹುದಾದ ಅಂಶಗಳ ಕುರಿತು ಸರ್ಕಾರದಿಂದ ಸೂಕ್ತ ನಿರ್ದೇಶನ ನೀಡಲಾಗುವುದು ಎಂದರು.

ಸಭೆಯಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ಉಡುಪಿ ಶಾಸಕ ರಘುಪತಿ ಭಟ್, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ರಾಜ್ಯ ಎಸ್‌ಸಿಪಿ -ಟಿಎಸ್‌ಪಿ ಕೋಶದ ನಿರ್ದೇಶಕಿ ಊರ್ಮಿಳಾ, ಹಿಂದುಳಿದ ವರ್ಗಗಳ ಇಲಾಖೆಯ ಅಪರ ನಿರ್ದೇಶಕ ಪ್ರದೀಪ್, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಅನಿತಾ ಮಡ್ಲೂರು ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News