ಮುಖ್ಯಮಂತ್ರಿ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

Update: 2022-01-11 13:33 GMT

ಬೆಂಗಳೂರು, ಜ.11: ಕೋವಿಡ್ ಸೋಂಕಿತರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಸಂಜೆ 4:30ಕ್ಕೆ ದೂರವಾಣಿ ಮೂಲಕ ಸಂಪರ್ಕಿಸಿದ ಪ್ರಧಾನಿ ನರೇಂದ್ರ ಮೋದಿ ಆರೋಗ್ಯ ವಿಚಾರಿಸಿದರು. ಅಲ್ಲದೆ, ಸೋಂಕಿಗೆ ಸೂಕ್ತ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು.

ಸುಮಾರು ಐದು ನಿಮಿಷಗಳ ಕಾಲ ನಡೆದ ಮಾತುಕತೆ ಉಭಯ ನಾಯಕರು ಮಾತನಾಡಿದ್ದು, ತಮಗೆ ಕೋವಿಡ್ ತಗಲಿರುವ ಬಗ್ಗೆ ಪ್ರಧಾನಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಣೆ ನೀಡಿದರು. ತಮ್ಮ ಜೊತೆಗೆ ಕುಟುಂಬದ ಇಬ್ಬರು ಸದಸ್ಯರಿಗೂ ಸೋಂಕು ತಗುಲಿದೆ ಎಂದು ತಿಳಿಸಿದರು. ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಪ್ರಧಾನಿ ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಪ್ರಧಾನಿಗೆ ಮುಖ್ಯಮಂತ್ರಿ ಮಾಹಿತಿ ನೀಡಿದರು. ಇದೀಗ ಬೆಂಗಳೂರಿನಲ್ಲಿ ವರ್ಚುವಲ್ ಆಗಿ ಸಭೆ ನಡೆಸುತ್ತಿದ್ದೇನೆ. ಜ.13ರಂದು ಸಂಜೆ ತಾವು ಕರೆದಿರುವ ಕೋವಿಡ್ ವರ್ಚುಯಲ್ ಸಭೆಗೆ ಪೂರ್ವಭಾವಿ ರೂಪದಲ್ಲಿ ಈ ಸಭೆ ನಡೆಸುತ್ತಿದ್ದೇನೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗಿದೆ. ತಜ್ಞರು ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರಧಾನಿಗೆ ಮುಖ್ಯಮಂತ್ರಿ ವಿವರಣೆ ನೀಡಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆ

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೋವಿಡ್ ಸೋಂಕಿತರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಂಗಳವಾರ ಬೆಳಗ್ಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು.

ಅಲ್ಲದೆ, ಶೀಘ್ರ ಗುಣಮುಖರಾಗುವಂತೆ ಸಿದ್ದರಾಮಯ್ಯ ಹಾರೈಸಿದರು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ಜ್ವರದಿಂದ ಬಳಲುತ್ತಿದ್ದ ಸಿದ್ದರಾಮಯ್ಯ ಅವರ ಆರೋಗ್ಯವನ್ನು ವಿಚಾರಿಸಿದ ಮುಖ್ಯಮಂತ್ರಿ, ಅವರಿಗೆ ಧನ್ಯವಾದ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News