BREAKING NEWS | ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ; 7 ಮಂದಿ ಮೃತ್ಯು

Update: 2022-01-14 04:01 GMT

ದಾವಣಗೆರೆ, ಜ.14: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತ(Accident)ದಲ್ಲಿ ಏಳು ಮಂದಿ ಮೃತಪಟ್ಟ(Death) ಘಟನೆ ಜಿಲ್ಲೆಯ ಜಗಳೂರು(Jagaluru) ತಾಲೂಕು ಬಳಿ ಶುಕ್ರವಾರ ಮುಂಜಾನೆ  ಸಂಭವಿಸಿರುವುದು ವರದಿಯಾಗಿದೆ.

ಜಗಳೂರಿನ ಕಾನನಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂದು ಮುಂಜಾವ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಹೊಸಪೇಟೆ ಕಡೆ ಹೋಗುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯಾದ ತೀವ್ರತೆಗೆ ಆರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಓರ್ವ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತಪಟ್ಟವರು ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನವರು ಎಂದು ತಿಳಿದು ಬಂದಿದ್ದು, ಅವರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News