ಭ್ರಷ್ಟಾಚಾರ ಆರೋಪ ಪ್ರಕರಣ: ರವಿ ಚನ್ನಣ್ಣನವರ್ ಸುದ್ದಿ ಪ್ರಸಾರಕ್ಕೆ ಮಧ್ಯಂತರ ತಡೆಯಾಜ್ಞೆ

Update: 2022-01-15 16:00 GMT

ಬೆಂಗಳೂರು, ಜ.15: ತಮ್ಮ ವಿರುದ್ಧ ಯಾವುದೇ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮಾನ್ಯ ಮಾಡಿದೆ.

ರವಿ ಡಿ. ಚನ್ನಣ್ಣನವರ್ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ ಸಂಬಂಧ ದೂರು ದಾಖಲಾಗಿದೆ ಎಂದು ಇತ್ತೀಚೆಗೆ ಹಲವು ಮಾಧ್ಯಮಗಳು ಈ ಸುದ್ದಿಯನ್ನು ಪ್ರಕಟಿಸಿದ್ದವು. 

ಈ ಸಂಬಂಧ ರವಿ ಡಿ.ಚನ್ನಣ್ಣನವರ್ ಅವರು ಸುದ್ದಿ ಪ್ರಸಾರಕ್ಕೆ ನಿರ್ಬಂಧ ವಿಧಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಮಧ್ಯಂತರ ಪ್ರತಿಬಂಧಕಾಜ್ಞೆ ನೀಡಿ ಆದೇಶ ಹೊರಡಿಸಿದ್ದಾರೆ. 

ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿವಿಧ ದಿನಪತ್ರಿಕೆಗಳು, ಸಂಜೆ ಪತ್ರಿಕೆಗಳು, ಸುದ್ದಿ ವಾಹಿನಿಗಳು ಸೇರಿದಂತೆ 37 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ. ಈ ಅರ್ಜಿಯ ವಿಚಾರಣೆಯನ್ನು ಫೆ.1ಕ್ಕೆ ಮುಂದೂಡಲಾಗಿದೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News