ನರಗುಂದದಲ್ಲಿ ಯುವಕನ ಹತ್ಯೆ ಪ್ರಕರಣ: ಗದಗ ಜಿಲ್ಲಾ ಎಸ್ಪಿಗೆ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಮ್ ಪತ್ರ

Update: 2022-01-19 15:44 GMT

ಬೆಂಗಳೂರು, ಜ.19: ನರಗುಂದದಲ್ಲಿ ಮುಸ್ಲಿಮ್ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಮ್ ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿರುವ ಅವರು, ಘಟನೆಯಲ್ಲಿ ಓರ್ವ ಯುವಕ ಹತ್ಯೆಯಾಗಿದ್ದು, ಓರ್ವ ಗಾಯಾಳು ಆಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲು ಆಗಬೇಕು. ನಗರದಲ್ಲಿ ಶಾಂತಿ ಕಾಪಾಡಲು ಹಾಗೂ ಇತರ ಬಡಾವಣೆಯಲ್ಲಿ ಸಮಸ್ಯೆಯಾಗದಂತೆ ಶಾಂತಿ ಸಮಿತಿಯ ಸಭೆಗಳನ್ನು ನಡೆಸಬೇಕು ಎಂದು ತಿಳಿಸಿದ್ದಾರೆ.

ಕೆಲವು ಯುವಕರು ಉದ್ದೇಶಪೂರ್ವಕವಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಗಾಳಿ ಸುದ್ದಿಗಳನ್ನು ಹರಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಪ್ರಕರಣಕ್ಕೆ ಸಂಬಂಧಿಸಿದ ಪ್ರಗತಿ ವಿವರಗಳನ್ನು ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಸಲ್ಲಿಸುವಂತೆ ಅಬ್ದುಲ್ ಅಝೀಮ್ ತಿಳಿಸಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News