​ಉಡುಪಿ ಜಿಲ್ಲೆ: 767 ಮಂದಿಗೆ ಕೊರೋನ ಪಾಸಿಟಿವ್

Update: 2022-01-20 14:24 GMT

ಉಡುಪಿ, ಜ.20: ಜಿಲ್ಲೆಯಲ್ಲಿ ಗುರುವಾರ ಕೋವಿಡ್‌ಗೆ ಪಾಸಿಟಿವ್ ಬಂದವರ ಸಂಖ್ಯೆ 767ಕ್ಕೆ ನೆಗೆದಿದೆ. ಆದರೆ ದಿನದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯೂ 439ರಷ್ಟಿದೆ. ಜಿಲ್ಲೆಯಲ್ಲಿ ಸದ್ಯ ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 5092 ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 767 ಮಂದಿಯಲ್ಲಿ 369 ಮಂದಿ ಪುರುಷರು ಹಾಗೂ 398 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 451 ಮಂದಿ ಉಡುಪಿ ತಾಲೂಕಿಗೆ ಸೇರಿದವರಾಗಿದ್ದಾರೆ. ಕುಂದಾಪುರ ತಾಲೂಕಿನ 210 ಹಾಗೂ ಕಾರ್ಕಳ ತಾಲೂಕಿನ 104 ಮಂದಿಯೊಂದಿಗೆ ಹೊರಜಿಲ್ಲೆಯ ಇಬ್ಬರು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ.

ಗುರುವಾರ ಪಾಸಿಟಿವ್ ಬಂದ 767 ಮಂದಿಯಲ್ಲಿ 36 ಮಂದಿಯನ್ನು ಕೋವಿಡ್ ಕೇರ್‌ಸೆಂಟರ್‌ಗೂ, 10 ಮಂದಿಯನ್ನು ಕೋವಿಡ್ ಆಸ್ಪತ್ರೆಗೂ, 10 ಮಂದಿಯನ್ನು ಕೋವಿಡ್ ಹೆಲ್ತ್ ಆಸ್ಪತ್ರೆಗೆ ಸೇರಿಸಿದ್ದು, ಉಳಿದ 711 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಈಗ ಜಿಲ್ಲೆಯಲ್ಲಿ ಒಟ್ಟು 158 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದು ಇವರಲ್ಲಿ 11 ಮಂದಿ ವೆಂಟಿಲೇಟರ್ ಹಾಗೂ 24 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಬುಧವಾರ 439 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೊರೋನ ದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 1676ಕ್ಕೇರಿದೆ. ನಿನ್ನೆ ಜಿಲ್ಲೆಯ ಉಡುಪಿ ತಾಲೂಕಿನಲ್ಲಿ 3219 ಮಂದಿ, ಕುಂದಾಪುರದಲ್ಲಿ 1507 ಹಾಗೂ ಕಾರ್ಕಳ ತಾಲೂಕಿನ 1100 ಮಂದಿ ಸೇರಿದಂತೆ ಒಟ್ಟು 5836 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 6620ಕ್ಕೇರಿದೆ.

703 ಮಂದಿಗೆ ಮುನ್ನೆಚ್ಚರಿಕೆ ಡೋಸ್: ಜಿಲ್ಲೆಯಲ್ಲಿ ಇಂದು ಒಟ್ಟು 703 ಮಂದಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥರಿಗೆ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 60 ವರ್ಷಕ್ಕೂ ಮೇಲ್ಪಟ್ಟ 433 ಮಂದಿ ಲಸಿಕೆ ಪಡೆದರೆ, 160 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 110 ಮಂದಿ ಮುಂಚೂಣಿ ಕಾರ್ಯಕರ್ತರು ಸಹ ಸೇರಿದ್ದಾರೆ.

931 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 931 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 221 ಮಂದಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ಕೋವ್ಯಾಕ್ಸಿನ್ ನೀಡಲಾಗಿದೆ. ಒಟ್ಟಾರೆಯಾಗಿ ದಿನದಲ್ಲಿ 399 ಮಂದಿ ಮೊದಲ ಡೋಸ್ ಹಾಗೂ 532 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ಉಡುಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News