ಕನ್ನಡ ಕಡ್ಡಾಯ: ವಿಚಾರಣೆ ಜ.31ಕ್ಕೆ ಮುಂದೂಡಿದ ಹೈಕೋರ್ಟ್

Update: 2022-01-20 15:54 GMT

ಬೆಂಗಳೂರು, ಜ.20: ಪದವಿ ಶಿಕ್ಷಣ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿ ಹೊರಡಿಸಲಾಗಿರುವ ಆದೇಶ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜ.31ಕ್ಕೆ ಮುಂದೂಡಿದೆ.

ಕನ್ನಡ ಕಲಿಯಬಯಸದ ವಿದ್ಯಾರ್ಥಿಗಳಿಗೆ ಕಡ್ಡಾಯ ಬೇಡ ಎಂದು ಹೈಕೋರ್ಟ್ ಆದೇಶಿಸಿತ್ತು. ಈ ಆದೇಶವನ್ನು ರಾಜ್ಯ ಸರಕಾರ ಪಾಲಿಸಿಲ್ಲ. ಅಲ್ಲದೆ, ವಿವಿಗಳಿಗೆ ಸರಕಾರ ಆದೇಶದ ಮಾಹಿತಿ ನೀಡಬೇಕಿತ್ತು. ಈ ಬಗ್ಗೆ ಸರಕಾರಕ್ಕೆ ನಿರ್ದೇಶಿಸಲು ಅರ್ಜಿದಾರರೂ ಮನವಿ ಕೂಡ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ಕುರಿತಾಗಿ ಎಲ್ಲರ ವಾದ ಆಲಿಸುವ ಸಂಬಂಧ ವಿಚಾರಣೆಯನ್ನು ಜ.31ಕ್ಕೆ ಮುಂದೂಡಲಾಗುವುದು ಎಂದು ಹೈಕೋರ್ಟ್ ನ್ಯಾಯಪೀಠ ತಿಳಿಸಿದೆ.     

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪದವಿಗೆ ಕನ್ನಡ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಬೆಂಗಳೂರಿನ ಸಂಸ್ಕೃತ ಭಾರತಿ ಟ್ರಸ್ಟ್, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ, ಶ್ರೀ ಹಯಗ್ರೀವ ಟ್ರಸ್ಟ್, ವ್ಯೋಮ ಲಿಂಗ್ವಿಸ್ಟಿಕ್ ಲ್ಯಾಬ್ಸ್ ಫೌಂಡೇಶನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಜ.31ಕ್ಕೆ ಮುಂದೂಡಿತು. 

ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ಕರ್ನಾಟಕ ಸರಕಾರ, ಉನ್ನತ ಶಿಕ್ಷಣ ಇಲಾಖೆ, ರಾಜ್ಯ ಉನ್ನತ ಶಿಕ್ಷಣ ಪರಿಷತ್‍ನ್ನು ಪ್ರತಿವಾದಿಗಳನ್ನಾಗಿಸಿ ಈ ಅರ್ಜಿ ಸಲ್ಲಿಸಲಾಗಿದೆ. 

ಅರ್ಜಿದಾರರ ಕೋರಿಕೆ: ರಾಜ್ಯದಲ್ಲಿ ಎಲ್ಲ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ  ಕಲಿಕೆ ಕಡ್ಡಾಯ ಮಾಡಿ ರಾಜ್ಯ ಸರಕಾರ ಆ.7ರಂದು ಆದೇಶ ಹೊರಡಿಸಿದೆ. ಇದು ಸಂವಿಧಾನದ ವಿಧಿ 14, 19, 21, 29 ಹಾಗೂ 30ರ ಆಶಯಗಳಿಗೆ ವಿರುದ್ಧವಾಗಿದೆ ಎಂದು ಸಂಸ್ಕøತ ಭಾರತಿ ಟ್ರಸ್ಟ್ ಸೇರಿದಂತೆ ವಿವಿಧ ಸಂಘಟನೆಗಳು ಅರ್ಜಿ ಸಲ್ಲಿಸಿವೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯವಿಲ್ಲದಿದ್ದರೂ, ಸರಕಾರ 12ನೆ ತರಗತಿ ಪೂರೈಸಿ ಶಿಕ್ಷಣಕ್ಕಾಗಿ ರಾಜ್ಯದ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಮಾಡಿದೆ. ಪದವಿ ಹಂತದಲ್ಲಿ ಕನ್ನಡ ಕಡ್ಡಾಯ ಮಾಡುವುದು ಸರಿಯಲ್ಲ. ಭಾಷೆ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುತ್ತದೆ. ಹೀಗಾಗಿ, ಪದವಿ ಹಂತದಲ್ಲಿ ಕನ್ನಡ ಕಡ್ಡಾಯ ಮಾಡಿರುವ ಸರಕಾರದ ಆದೇಶವನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News