ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕೋವಿಡ್ ದೃಢ: ಶೀಘ್ರ ಗುಣಮುಖರಾಗುವಂತೆ ಗಣ್ಯರ ಹಾರೈಕೆ

Update: 2022-01-22 16:22 GMT

ಬೆಂಗಳೂರು, ಜ.22: ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕೋವಿಡ್ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೋವಿಡ್ ಎರಡನೆ ಅಲೆ ಸಂದರ್ಭದಲ್ಲಿಯೂ ದೇವೇಗೌಡರಿಗೆ ಸೋಂಕು ತಗುಲಿತ್ತು. ಅವರಿಗೆ ಕೆಲ ದಿನಗಳಿಂದ ಕೆಮ್ಮು ಇದ್ದ ಹಿನ್ನೆಲೆಯಲ್ಲಿ ಕೊರೋನ ಪರೀಕ್ಷೆಗೆ ಒಳಗಾಗಿದ್ದರು. ಈ ಸಂದರ್ಭದಲ್ಲಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೇವೇಗೌಡರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿರುವ ಮಣಿಪಾಲ್ ಆಸ್ಪತ್ರೆಯು, ದೇವೇಗೌಡರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ತಜ್ಞರ ವೈದ್ಯರ ಉಸ್ತುವಾರಿಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಡಾ.ಕೆ.ಸುಧಾಕರ್, ಮುರುಗೇಶ್ ನಿರಾಣಿ, ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಸೇರಿದಂತೆ ಇನ್ನಿತರ ಗಣ್ಯರು ದೇವೇಗೌಡರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

ಸಿಎಂ ಕರೆ: ಅನಾರೋಗ್ಯದಿಂದ ಇಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೊಂದಿಗೆ ದೂರವಾಣಿ ಕರೆ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಆರೋಗ್ಯ ವಿಚಾರಿಸಿದರು.

ಶೀಘ್ರವಾಗಿ ಗುಣಮುಖರಾಗುವಂತೆ ಹಾರೈಸಿದ ಅವರು, ಮಣಿಪಾಲ ಆಸ್ಪತ್ರೆಯ ವೈದ್ಯರೊಂದಿಗೂ ಮಾತನಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

ಎಚ್.ಡಿ.ದೇವೇಗೌಡರಿಗೆ ಕೊರೋನ ಸೋಂಕು ದೃಢಪಟ್ಟಿರುವ ಸುದ್ದಿ ತಿಳಿಯಿತು. ಅವರು ಆದಷ್ಟು ಬೇಗ ಸಂಪೂರ್ಣ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಬಳಿ ಸಂಪರ್ಕದಲ್ಲಿದ್ದು ಅವರ ಆರೋಗ್ಯದ ಬಗ್ಗೆ ನಿರಂತರ ಮಾಹಿತಿ ಪಡೆಯುತ್ತೇನೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News