‘ಕರ್ನಾಟಕ ಮೆದುಳು ಆರೋಗ್ಯ ಕಾರ್ಯಕ್ರಮ’ಕ್ಕೆ ಸಚಿವ ಡಾ.ಕೆ.ಸುಧಾಕರ್ ಚಾಲನೆ

Update: 2022-01-25 17:44 GMT

ಬೆಂಗಳೂರು, ಜ.25: ದೇಶದಲ್ಲೇ ಮೊದಲ ಬಾರಿಗೆ ನಿಮ್ಹಾನ್ಸ್ ಸಂಸ್ಥೆಯು ನೀತಿ ಆಯೋಗ ಹಾಗೂ ಆರೋಗ್ಯ ಇಲಾಖೆಯ ನೆರವಿನಲ್ಲಿ ‘ಕರ್ನಾಟಕ ಮೆದುಳು ಆರೋಗ್ಯ ಕಾರ್ಯಕ್ರಮ' (ಕರ್ನಾಟಕ ಬ್ರೇನ್ ಹೆಲ್ತ್ ಇನೀಶಿಯೇಟಿವ್) ಜಾರಿ ಮಾಡಿದ್ದು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕಾರ್ಯಕ್ರಮಕ್ಕೆ ವರ್ಚುವಲ್ ಚಾಲನೆ ನೀಡಿದ್ದಾರೆ.

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿಮ್ಹಾನ್ಸ್‍ನಿಂದ ಈ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಜಾರಿ ಮಾಡಿದ್ದು, ಮಾನಸಿಕ ರೋಗಗಳ ತಪಾಸಣೆ ಮಾಡುವ ಹಾಗೂ ಚಿಕಿತ್ಸೆ ನೀಡುವ ಕುರಿತು ವೈದ್ಯರಿಗೆ ತರಬೇತಿ ನೀಡಲಾಗುತ್ತದೆ. ಜೊತೆಗೆ ರೋಗಿಗಳನ್ನು ಪತ್ತೆ ಮಾಡಿ ಚಿಕಿತ್ಸೆ ನೀಡಲಾಗುತ್ತದೆ. 

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಕೋವಿಡ್ ಸಂದರ್ಭದಲ್ಲಿ ನಿಮ್ಹಾನ್ಸ್ ನೇತೃತ್ವದಲ್ಲಿ, ಅನೇಕ ಕೊರೋನ ರೋಗಿ ಹಾಗೂ ಕುಟುಂಬದವರ ಮಾನಸಿಕ ಆರೋಗ್ಯ ನಿರ್ವಹಣೆಗೆ ಒತ್ತು ನೀಡಲಾಯಿತು. ಕೆಲ ಪ್ರಕರಣಗಳಲ್ಲಿ ಆತ್ಮಹತ್ಯೆಯ ಘಟನೆಯೂ ನಡೆಯಿತು. ಆ ವೇಳೆ ಅನೇಕರಿಗೆ ಮಾನಸಿಕ ಆರೋಗ್ಯ ಆಪ್ತ ಸಮಾಲೋಚನೆ ಸೇವೆ ನೀಡಲಾಯಿತು. ಇದನ್ನು ಇನ್ನಷ್ಟು ಮುಂದುವರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಮಾನಸಿಕ ಆರೋಗ್ಯವು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶ. ಮೆದುಳಿನ ಆರೋಗ್ಯ ಇಡೀ ದೇಹದ ಒಟ್ಟು ಆರೋಗ್ಯ ಕಾಪಾಡಲು ಅಗತ್ಯವಾಗಿದೆ. ನಿಮ್ಹಾನ್ಸ್, ಜನರ ಬಳಿಯೇ ಹೋಗಿ ಆರೋಗ್ಯ ಸೇವೆ ನೀಡುವಂತಹ ಪ್ರತಿಷ್ಠಿತ ಸಂಸ್ಥೆಯಾಗಿದೆ. ಸಾಮಾನ್ಯ ಫಿಸೀಶಿಯನ್ ಕೂಡ ಮಾನಸಿಕ ಆರೋಗ್ಯ ಸೇವೆ ನೀಡುವಂತೆ ನಿಮ್ಹಾನ್ಸ್ ತರಬೇತಿ ನೀಡಲಿದೆ ಎಂದು ಅವರು ಹೇಳಿದರು.
ನವಜಾತ ಶಿಶುವಿಗೂ ಮಾನಸಿಕ ಆರೋಗ್ಯದ ತಪಾಸಣೆ ಮಾಡಿ ರೋಗ ಪತ್ತೆ ಮಾಡುವ ಅಗತ್ಯವಿದೆ. ಸಾಮಾಜಿಕ ಪರಿಸ್ಥಿತಿ, ಕೌಟುಂಬಿಕ ಸ್ಥಿತಿ ಮೊದಲಾದ ಕಾರಣಗಳಿಂದ ಅನೇಕರು ಮಾನಸಿಕ ಒತ್ತಡದಿಂದ ಬಳಲುತ್ತಾರೆ. ಇದು ಪ್ರತಿ ದಿನದ ಚಟುವಟಿಕೆಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಸುಧಾಕರ್ ತಿಳಿಸಿದರು.

ಆದುದರಿಂದ, ಹೆಚ್ಚು ಮಾನಸಿಕ ಆರೋಗ್ಯ ತಜ್ಞರು ರಾಜ್ಯಕ್ಕೆ ಬೇಕಾಗಿದೆ. ರಾಜ್ಯದಲ್ಲಿ ಸುಮಾರು 2 ಲಕ್ಷ ಮಂದಿ ವೈದ್ಯ ಶಿಕ್ಷಣ ಪಡೆಯುತ್ತಿದ್ದಾರೆ. ಇವರನ್ನು ಬಳಸಿಕೊಂಡು ಮಾನಸಿಕ ಅನಾರೋಗ್ಯಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಹೇಳಿದರು.
ಈ ಪ್ರಾಯೋಗಿಕ ಕಾರ್ಯಕ್ರಮವನ್ನು ಉತ್ತಮವಾಗಿ ಜಾರಿ ಮಾಡಿ ಸರಕಾರಕ್ಕೆ ವರದಿ ನೀಡಬೇಕು. ನಂತರ ಮುಂದಿನ ಬಜೆಟ್‍ನಲ್ಲಿ ಈ ಕಾರ್ಯಕ್ರಮಕ್ಕಾಗಿ ಹೆಚ್ಚು ಅನುದಾನ ಮೀಸಲಿಡಬಹುದು ಎಂದು ಸುಧಾಕರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News