ಹುಚ್ಚು ಹಿಡಿದವರು ಮಾತ್ರ ಕಾಂಗ್ರೆಸ್ ಗೆ ಹೋಗುತ್ತಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ

Update: 2022-01-26 08:59 GMT
 ಗೃಹ ಸಚಿವ ಆರಗ ಜ್ಞಾನೇಂದ್ರ 

ತುಮಕೂರು: ''ಹುಚ್ಚರು ಮತ್ತು ಬುದ್ದಿ ಇಲ್ಲದವರು ಮಾತ್ರ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಾರೆ. ಬುದ್ದಿ ಇರುವವರು ಯಾರೂ ಕಾಂಗ್ರೆಸ್ ಪಕ್ಷಕ್ಕೆ ಸೇರುವುದಿಲ್ಲ'' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಜಿಲ್ಲಾ ಉಸ್ತುವಾರಿ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಗಣರಾಜ್ಯೋತ್ಸವವನ್ನು ಉದ್ಘಾಟಿಸಲು ತುಮಕೂರಿಗೆ ಆಗಮಿಸಿದ ಜ್ಞಾನೇಂದ್ರ ಧ್ವಜಾರೋಹಣ ಕಾರ್ಯಕ್ರಮ ನಂತರ ಮಾಧ್ಯಮಗಳೊಂದಿಗೆ ಮಾತನಾಡುತಿದ್ದ ಅವರು,.''ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಕಾರ. ಇಲ್ಲಿ ಬಿಜೆಪಿ ಸರಕಾರವಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ನಾಯಕರು. ಅವರ ನೇತೃತ್ವದಲ್ಲಿ ಪಕ್ಷ ಬಲಿಷ್ಟವಾಗಿದೆ.ಇಂತಹ ಸಂದರ್ಭದಲ್ಲಿ ಯಾರೊಬ್ಬರು ಬಿಜೆಪಿ ತೊರೆಯುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಣ್ಣಪುಟ್ಟ ಭಿನ್ನ ಅಭಿಪ್ರಾಯಗಳು ಇರುವುದು ಸಹಜ. ಅವುಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುತ್ತೇವೆ'' ಎಂದರು.

ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಕುರಿತು ಮಾತನಾಡಿದ ಗೃಹ ಸಚಿವರು, ''ಮುಖ್ಯಮಂತ್ರಿ ಪರಮಾಧಿಕಾರವನ್ನು ಬಳಸಿ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ. ಹೊರ ಜಿಲ್ಲೆಗಳಿಗೆ ನೇಮಕ ಮಾಡಿದಾಗ ಅಲ್ಲಿನ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ಕೆಲಸ ಮಾಡಲು ಅನುಕೂಲವಾಗುತ್ತದೆ'' ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

''ಪೊಲೀಸ್ ಇಲಾಖೆಯಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕೆಲಸಗಳಿಗೆ ಸಂಬಂಧಿಸಿದಂತೆ ಔರಾದ್ಕರ್ ವರದಿ ಸರಕಾರಕ್ಕೆ ಸಲ್ಲಿಕೆಯಾಗಿದೆ. ವರದಿ ಅನುಷ್ಠಾನ ವಿಳಂಬವಾಗುತ್ತಿರುವ ಬಗ್ಗೆ ಅಸಮಾಧಾನ ಇದೆ. ಈ ಸಂಬಂಧ ನಾನು ಆರ್ಥಿಕ ಇಲಾಖೆ ಜೊತೆ ಮಾತುಕತೆ ನಡೆಸುತ್ತಿದ್ದೇನೆ. ಪೊಲೀಸರಿಗೆ ನ್ಯಾಯ ಒದಗಿಸುತ್ತೇನೆ'' ಎಂದು ಭರವಸೆ ನೀಡಿದರು.

''ಮೈಸೂರಿನ ಹೊರವಲಯದಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಸಣ್ಣ ಗುರುತು ಪತ್ತೆಯಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲು ಸಾಧ್ಯವಾಯಿತು. ತುಮಕೂರು ಗ್ರಾಮಾಂತರದಲ್ಲಿ ನಿರ್ಜನ ಪ್ರದೇಶದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಸಾಕ್ಷ್ಯಗಳು ಲಭ್ಯವಾದ ಕೂಡಲೇ ಆರೋಪಿಗಳನ್ನು ಬಂಧಿಸುತ್ತೇವೆ'' ಎಂದು ಹೇಳಿದರು.

ಈ ವೇಳೆ ಶಾಸಕ ಜಿ.ಬಿ.ಜೋತಿಗಣೇಶ್, ಮೇಯರ್ ಬಿ.ಜಿ.ಕೃಷ್ಣಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News