ಶಿವಮೊಗ್ಗ ಕಾರಾಗೃಹಕ್ಕೆ ಪೊಲೀಸ್ ದಾಳಿ: ಆರೋಪಿಯೊಬ್ಬನಿಂದ ಮೊಬೈಲ್ ವಶ
ಶಿವಮೊಗ್ಗ, ಜ.27: ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಕಳೆದ ರಾತ್ರಿ ಪೊಲೀಸರು ದಾಳಿ ನಡೆಸಿದ್ದು, ಪ್ರಮುಖ ಆರೋಪಿ ಒಬ್ಬನಿಂದ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ.
ಪ್ರಕರಣವೊಂದಕ್ಕೆ ಸಂಬಂಧಿಸಿ ಜೈಲು ಪಾಲಾಗಿರುವ ಆರೋಪಿ ಬಚ್ಚನ್ ಎಂಬಾತ ಮೊಬೈಲ್ ಫೋನ್ ಬಳಕೆ ಮಾಡುತ್ತಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಜೈಲಿನಿಂದಲೆ ಕರೆ ಮಾಡಿದ್ದನೆನ್ನಲಾದ ಬಚ್ಚನ್, ಉದ್ಯಮಿಯೊಬ್ಬರಿಗೆ ಬೆದರಿಕೆಯೊಡ್ಡಿರುವ ಆರೋಪದ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಶಿವಮೊಗ್ಗ ಸಿಇಎನ್ ಠಾಣೆ ಇನ್ ಸ್ಪೆಕ್ಟರ್ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ಮಾಡಲಾಗಿದೆ. ಈ ವೇಳೆ ಬಚ್ಚನ್ ನಲ್ಲಿದ್ದ ಮೊಬೈಲ್ ಫೋನ್ ಒಂದನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಆತನನ್ನು ಪ್ರತ್ಯೇಕವಾಗಿ ಇರಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.