ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜತೆ ಚರ್ಚೆ: ಎಚ್.ಡಿ.ಕುಮಾರಸ್ವಾಮಿ

Update: 2022-01-31 13:30 GMT

ಬೆಂಗಳೂರು, ಜ.31: ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಬಂಧಿತ ಸಚಿವರ ಜತೆ ಮಾತುಕತೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಸೋಮವಾರ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿಯ ಮುಖಂಡರು ಬಿಡದಿಯ ಕೇತಗಾನಹಳ್ಳಿಯಲ್ಲಿರುವ ತಮ್ಮ ತೋಟದ ಮನೆಯಲ್ಲಿ ಭೇಟಿಯಾಗಿ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಈ ಬಗ್ಗೆ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿಯೂ ಪ್ರಸ್ತಾಪ ಮಾಡುವುದಾಗಿ ತಿಳಿಸಿದರು.

ಅನೇಕ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು ನನೆಗುದಿಗೆ ಬಿದ್ದಿವೆ. ಅವುಗಳನ್ನು ಈಡೇರಿಸಲೇಬೇಕು. ರಾಜ್ಯದಲ್ಲಿ ಅಸಂಖ್ಯಾತ ಅಂಗನವಾಡಿ ಕಾರ್ಯಕರ್ತೆಯರಿದ್ದು, ಕೋವಿಡ್ ಸೋಂಕಿನ ಕಾಲದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿದರು.

ಆ ವಿಷಮ ಪರಿಸ್ಥಿತಿಯಲ್ಲಿ 59 ಕಾರ್ಯಕರ್ತೆಯರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ ಅನೇಕರು ಸೋಂಕಿನ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಸರಕಾರ ಮಾನವೀಯ ನೆಲೆಗಟ್ಟಿನಲ್ಲಿ ಇವರ ಸಮಸ್ಯೆಗಳನ್ನು ಬಗೆಹರಿಸಬೇಕು. ಗ್ರಾಮೀಣ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರನ್ನು ನಿರ್ಲಕ್ಷ್ಯ ಮಾಡುವುದು ಬೇಡ ಎಂದು ಕುಮಾರಸ್ವಾಮಿ ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವುದರ ಜತೆಗೆ, ಎನ್‍ಪಿಎಸ್ ವಂಚಿತರಾಗಿ ನಿವೃತ್ತಿಯಾದ ಎಲ್ಲರಿಗೂ ಪರಿಹಾರ ನೀಡಬೇಕು. ಅದಕ್ಕೆ ಅಗತ್ಯವಾದ 3.39 ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ತೆಗೆದಿರಿಸಬೇಕು ಎಂದು ಅವರು ಸರಕಾರವನ್ನು ಒತ್ತಾಯ ಮಾಡಿದರು.

ಸಮಿತಿಯ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮೀ ಮತ್ತಿತರರು ಬಿಡದಿಯ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News