ಫೆ.9: ಯುವ ವಿಜ್ಞಾನಿ ಸ್ಪರ್ಧೆ
ಮಂಗಳೂರು, ಫೆ.4: ರಾಜ್ಯ ವಿಜ್ಞಾನ ಪರಿಷತ್ ಮತ್ತು ರಾಜ್ಯ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಕೆ-ಸ್ಟೆಪ್ಸ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಫೆ.9ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯನ್ನು ಆಯೋಜಿಸಲಾಗುವುದು ಎಂದು ರಾಜ್ಯ ವಿಜ್ಞಾನ ಪರಿಷತ್ ಪ್ರಕಟನೆಯಲ್ಲಿ ತಿಳಿಸಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು.ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ 5,000 ರೂ., ದ್ವಿತೀಯ ಬಹುಮಾನ 3,000 ರೂ. ಹಾಗೂ ಅಭಿನಂದನೆ ಪತ್ರ ನೀಡಲಾಗುತ್ತದೆ.
ಜಿಲ್ಲಾ ಹಂತದಲ್ಲಿ ನಗದು ಬಹುಮಾನದೊಂದಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿ ಗಳಿಗೆ ರಾಜ್ಯಮಟ್ಟದ ಯುವ ವಿಜ್ಞಾನಿಗಳ ಸಮಾವೇಶದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ.
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗುವ 4 ಯುವ ವಿಜ್ಞಾನಿಗಳಿಗೆ ತಲಾ 10,000 ರೂ.ಗಳ ನಗದು ಬಹುಮಾನದೊಂದಿಗೆ ಸ್ಮರಣಿಕೆ ಮತ್ತು ಯುವ ವಿಜ್ಞಾನ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಗುತ್ತದೆ.
ಆಸಕ್ತ ವಿದ್ಯಾರ್ಥಿಗಳು ಕಾರ್ಯಕ್ರಮ ಸಂಯೋಕಿ ಮೀನಾಕ್ಷಿ ಶಿವಾನಂದ ಕುಡಸೋಮಣ್ಣ (ಮೊ.ಸಂ: 7353960666, ಮೊ.ಸಂ: 9008442557, 9483549159, 9449530245)ರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.