ದ.ಕ. ಜಿಲ್ಲೆಯ ಶಾಸಕರೊಂದಿಗೆ ಬಜೆಟ್ ಪೂರ್ವ ಸಮಾಲೋಚನಾ ಸಭೆ: ಸಚಿವ ಸುನೀಲ್ ಕುಮಾರ್

Update: 2022-02-05 06:58 GMT

ಮಂಗಳೂರು, ಫೆ.5: ರಾಜ್ಯ ಬಜೆಟ್ ನಲ್ಲಿ ದ.ಕ. ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಗಮನಹರಿಸಲು ಶಾಸಕರೊಂದಿಗೆ ಫೆ.11ರಂದು  ಸಮಾಲೋಚನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಫೆ.11ರಂದು ಕೆಡಿಪಿ ಸಭೆಯ ಸಂದರ್ಭದಲ್ಲಿ ಎಲ್ಲಾ ಶಾಸಕರ ಜೊತೆ ರಾಜ್ಯ ಬಜೆಟ್ ನಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಪೂರಕ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

*ಹಿಜಾಬ್ ವಿಚಾರದಲ್ಲಿ ಕೆಲವು ವ್ಯಕ್ತಿ ಮತ್ತು ಸಂಘಟನೆಗಳು ಸೇರಿ ಷಡ್ಯಂತ್ರ ನಡೆಸುತ್ತಿವೆ. ಬಿಜೆಪಿ ತ್ರಿವಳಿ ತಲಾಖ್ ರದ್ದು ಮಾಡಿ ಮುಸ್ಲಿಮ್ ಮಹಿಳೆಯರಿಗೆ ಭದ್ರತೆ ನೀಡಿದ್ದು ಮೋದಿ ಸರಕಾರ. ಇದನ್ನು ಅರ್ಥ ಮಾಡಿಕೊಂಡು ಮುಂದಿನ ದಿನಗಳಲ್ಲಿ ಸಮಾಜದ ಮುಖ್ಯವಾಹಿನಿಗೆ ಬರುವ ರೀತಿಯಲ್ಲಿ ಪ್ರಯತ್ನ ಮಾಡಿ. ಶಾಲೆಯ ಒಳಗೆ ಸಮವಸ್ತ್ರದ ನಿಯಮಗಳನ್ನು ಪಾಲನೆ ಮಾಡಲು ಮನವಿ ಮಾಡುವುದಾಗಿ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಉಸ್ತುವಾರಿ ಸಚಿವರ ಕಚೇರಿಯನ್ನು ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸಿದರು.

ಈ ವೇಳೆ ಶಾಸಕರಾದ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಪ್ರತಾಪ್ ಸಿಂಹ ನಾಯಕ್, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮೀನುಗಾರಿಕೆ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಜಿಪಂ ಸಿಇಒ ಡಾ.ಕುಮಾರ್, ಮೈಸೂರು ಇಲೆಕ್ಟ್ರಿಕಲ್  ಇಂಡಸ್ಟ್ರೀಸ್ ಲಿ. ಅಧ್ಯಕ್ಷ ಸಂತೋಷ್ ಕುಮಾರ್ ಬೊಳಿಯಾರ್, ಮಂಗಳೂರು ಕಂದಾಯ ವಿಭಾಗದ ಸಹಾಯಕ ಆಯುಕ್ತ ಮದನ್ ಮೋಹನ್ ಮೊದಲಾದವರು ಉಪಸ್ಥಿತರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News