ಕಾಂಗ್ರೆಸ್ ನಾಯಕರಿಂದ ಬೆಂಕಿಗೆ ತುಪ್ಪ ಸುರಿಯವ ಕೆಲಸ: ಗೃಹಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು, ಫೆ.9: ಶಾಲಾ ಸಮವಸ್ತ್ರ ಧರಿಸುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದು, ಇದೇ ರೀತಿಯಲ್ಲಿ ಮುಂದುವರಿದರೆ, ಜನರು ಆ ಪಕ್ಷವನ್ನು ಅರಬ್ಬಿ ಸಮುದ್ರಕ್ಕೆ ಎಸೆಯುವ ಕೆಲಸ ಮಾಡುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಸಚಿವರು, ಕೆಪಿಸಿಸಿ ಅಧ್ಯಕ್ಷರು, ವಿಧ್ಯಾರ್ಥಿಗಳು ಶಿವಮೊಗ್ಗದಲ್ಲಿ ರಾಷ್ಟ್ರ ಧ್ವಜ ಇಳಿಸಿ ಕೇಸರಿ ಧ್ವಜ ಏರಿಸಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ. ಕಾಲೇಜು ಆವರಣದಲ್ಲಿ ರಾಷ್ಟ್ರ ಧ್ವಜ ಹಾರುತ್ತಿರಲಿಲ್ಲ. ಡಿ.ಕೆ.ಶಿವಕುಮಾರ್ ಬೇಜವಾಬ್ದಾರಿಯುತವಾಗಿ ಮಾತನಾಡಿದ್ದಾರೆ, ಬೆಂಕಿಗೆ ತುಪ್ಪ ಸುರಿಸುವ ಕೆಲಸ ಮಾಡಿದ್ದಾರೆ ಎಂದರು.
ಇಂಥ ಬೇಜವಾಬ್ದಾರಿ ಹಾಗೂ ಹಸಿ ಸುಳ್ಳು ಹೇಳಿಕೆಯನ್ನು ಒಬ್ಬ ಹಿರಿಯ ಕಾಂಗ್ರೆಸ್ ನಾಯಕರಿಂದ ಬರುತ್ತದೆ ಎಂದರೆ, ಅವರ ಉದ್ದೇಶ ಏನಿರಬಹುದು, ಎಂದು ಸಾರ್ವಜನಿಕರು ಊಹಿಸುತ್ತಾರೆ. ವಿದ್ಯಾರ್ಥಿಗಳ ಮನಸ್ಸಿನಲ್ಲಿ ಮತೀಯ ಭಾವನೆಗಳನ್ನು ತುಂಬಬಾರದು ಎಂದು ಗೃಹಸಚಿವರು.
ರಾಜ್ಯದಲ್ಲಿ ಕಾಂಗ್ರೆಸ್ ಪ್ರಸಕ್ತ ವಿಪಕ್ಷ ಸ್ಥಾನದಲ್ಲಿದೆ, ಇದೇ ಪ್ರವೃತ್ತಿ ಮುಂದುವರಿಸಿದರೆ, ಇವರ ಪಕ್ಷವನ್ನು ಜನರು ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ನಿನ್ನೆಯ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ, ಕೆಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಪ್ರೇರಣಾ ಶಕ್ತಿಗಳು ಯಾರಿದ್ದಾರೆ ಎಂಬುದರ ಬಗ್ಗೆಯೂ ತನಿಖೆ ಆಗಲಿದೆ ಎಂದು ಸಚಿವರು ತಿಳಿಸಿದರು.