ಮುಂದಿನ ದಿನಗಳಲ್ಲಿ ಬಿಜೆಪಿಯ ಕೆಲವು ಪ್ರಮುಖ ನಾಯಕರು ಜೈಲು ಸೇರಲಿದ್ದಾರೆ: ಸಂಜಯ್ ರಾವತ್

Update: 2022-02-14 17:53 GMT

ಮುಂಬೈ, ಫೆ. 14: ಮುಂದಿನ ಕೆಲವು ದಿನಗಳಲ್ಲಿ ಬಿಜೆಪಿಯ ಕೆಲವು ನಾಯಕರು ಜೈಲು ಸೇರಲಿದ್ದಾರೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಅವರು ಸೋಮವಾರ ಹೇಳಿದ್ದಾರೆ.

ಉದ್ದವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರಕಾರದ ಕೆಲವು ನಾಯಕರ ವಿರುದ್ಧ ಪ್ರತಿಪಕ್ಷ ಬಿಜೆಪಿ ಭ್ರಷ್ಟಾಚಾರದ ಆರೋಪ ಮಾಡಿದ ಕೆಲವು ದಿನಗಳ ಬಳಿಕ ಸಂಜಯ್ ರಾವತ್ ಅವರು ಈ ಹೇಳಿಕೆ ನೀಡಿದ್ದಾರೆ.

ಮುಂಬೈಯಲ್ಲಿರುವ ಶಿವಸೇನೆಯ ಕೇಂದ್ರ ಕಚೇರಿಯಲ್ಲಿ ಪಕ್ಷದ ಪ್ರಮುಖ ನಾಯಕರು ಉಪಸ್ಥಿತಿಯಲ್ಲಿ ಮಂಗಳವಾರ ನಡೆಯಲಿರುವ ಪತ್ರಿಕಾಗೋಷ್ಠಿಯ ಸಂದರ್ಭ ಈ ಬಿಜೆಪಿ ನಾಯಕರ ಹೆಸರು ಬಹಿರಂಗಗೊಳಿಸಲಾಗುವುದು ಎಂದು ರಾವತ್ ಸುದ್ದಿಗಾರರಿಗೆ ತಿಳಿಸಿದರು.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಳೆದ ವರ್ಷ ನವೆಂಬರ್ನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿದ್ದ ರಾಜ್ಯದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರು ಶೀಘ್ರದಲ್ಲಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಅವರು ತಿಳಿಸಿದರು. ಈ ಹಿಂದೆ ಬಿಜೆಪಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಅಗಾಡಿ (ಶಿವಸೇನೆ, ಎನ್ಸಿಪಿ ಹಾಗೂ ಕಾಂಗ್ರೆಸ್ ಒಳಗೊಂಡ) ಮಹಾರಾಷ್ಟ್ರದ ಸರಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿತ್ತು. ಶಿವಸೇನೆ ಹಾಗೂ ಠಾಕ್ರೆ ಕುಟುಂಬದ ವಿರುದ್ಧ ಮಾಡಿರುವ ಸುಳ್ಳು ಆರೋಪ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ದಾದಾ ಗಿರಿಗೆ ಸೂಕ್ತ ಉತ್ತರ ನೀಡಲಾಗುವುದು ಎಂದು ಅವರು ಹೇಳಿದರು. ‘‘ಕೇಂದ್ರದ ತನಿಖಾ ಸಂಸ್ಥೆಗಳ ಮೂಲಕ ಬೆದರಿಕೆ ಒಡ್ಡಬೇಡಿ. ನಾವೇನು ಹೆದರಲಾರೆವು. ನಿಮಗೆ ಏನು ಬೇಕೋ ಅದನ್ನು ಮಾಡಿ’’ ಎಂದು ರಾವತ್ ಅವರು ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News