ಕಟ್ಟಡ ಕಾರ್ಮಿಕರ ಹೆಸರಿನಲ್ಲಿ ನಕಲಿ ನೋಂದಣಿಗೆ ತಡೆಗಟ್ಟಲು ಕ್ರಮ: ಸಚಿವ ಶಿವರಾಮ್ ಹೆಬ್ಬಾರ್

Update: 2022-02-15 12:48 GMT

ಬೆಂಗಳೂರು, ಫೆ. 15: ‘ರಾಜ್ಯದಲ್ಲಿ ಕಟ್ಟಡ ಕಾರ್ಮಿಕರಿಗೆ ನೀಡುವ ಸೌಲಭ್ಯಗಳ ದುರ್ಬಳಕೆ ತಡೆಗಟ್ಟಲು, ಕಟ್ಟಡ ಕಾರ್ಮಿಕರ ಹೆಸರಿನಲ್ಲಿ ಆಗುತ್ತಿರುವ ನಕಲಿ ನೋಂದಣಿ ತಪ್ಪಿಸಲು ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ' ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ತಿಳಿಸಿದ್ದಾರೆ.

ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಸಿ.ಎಂ.ನಿಂಬಣ್ಣನವರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ‘ಕಟ್ಟಡ ಕಾರ್ಮಿಕರಿಗೆ ಸರಕಾರ ಹೆಚ್ಚಿನ ಸೌಲಭ್ಯಗಳನ್ನು ನೀಡುತ್ತಿದೆ. ಹೀಗಾಗಿ ನಕಲಿ ನೋಂದÀಣಿ ಆಗುತ್ತಿರುವುದು ಸರಕಾರದ ಗಮನಕ್ಕೆ ಬಂದಿದ್ದು, ಈ ನಕಲಿ ನೋಂದಣಿ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಕೆಲ ಅಧಿಕಾರಿಗಳ ಮೇಲೆಯೂ ಕ್ರಮ ಜರುಗಿಸಿದ್ದೇವೆ' ಎಂದು ಮಾಹಿತಿ ನೀಡಿದರು.

‘ಜೊತೆಗೆ ಕಟ್ಟಡ ಕಾರ್ಮಿಕರ ನೋಂದಣಿಯಲ್ಲಿ ಖೋಟ್ಟಿ ನೋಂದಣಿಗಳಾಗುತ್ತಿರುವುದು ತಡೆಯಲು ನೋಂದಣಿ ಕ್ರಮವನ್ನು ಬದಲಾವಣೆ ಮಾಡಿದ್ದೇವೆ. ಜೊತೆಗೆ ನಕಲಿ ನೋಂದಣಿ ಮಾಡಿದವರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ನೋಂದಣಿ ವ್ಯವಸ್ಥೆಯಲ್ಲೇ ಬದಲಾವಣೆ ತಂದು ನಿಜವಾದ ಕಾರ್ಮಿಕರಿಗೆ ಸೌಲಭ್ಯಗಳು ಸಿಗುವಂತೆ ಸರಕಾರ ಕ್ರಮ ವಹಿಸಲಿದೆ' ಎಂದು ಅವರು ಹೇಳಿದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಸದಸ್ಯ ನಿಂಬಣ್ಣನವರ್, ‘ಕಲಘಟಗಿ ಕ್ಷೇತ್ರದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸೌಲಭ್ಯ ಪಡೆದುಕೊಳ್ಳಲು ನಕಲಿ ನೋಂದಣಿ ವ್ಯಾಪಕವಾಗಿ ನಡೆಯುತ್ತಿದ್ದು, ಇದರಿಂದ ಸರಕಾರದ ಹಣ ದುರ್ಬಳಕೆ ಆಗುತ್ತಿದ್ದು, ಅದನ್ನು ತಡೆಗಟ್ಟಬೇಕು' ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News