ನಿಯಮ ಉಲ್ಲಂಘಿಸಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ: ಸಮಗ್ರ ವರದಿ ಸಲ್ಲಿಕೆಗೆ ಹೈಕೋರ್ಟ್ ನಿರ್ದೇಶನ

Update: 2022-02-15 17:01 GMT

ಬೆಂಗಳೂರು, ಫೆ.15: ರಾಜ್ಯದಲ್ಲಿ ಯಾವ್ಯಾವ ಪ್ರದೇಶಗಳಲ್ಲಿ ಕಾನೂನಿನ ನಿಯಮಗಳನ್ನು ಉಲ್ಲಂಘಿಸಿ ಅರಣ್ಯ ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ ಎಂಬ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿದೆ.

ಈ ಕುರಿತಂತೆ ವಾಣಿ ವಿಲಾಸ ಸಿಮೆಂಟ್ ಪೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು. 

ವಿಚಾರಣೆ ವೇಳೆ ಹಲವು ಪ್ರಕರಣಗಳಲ್ಲಿ ನಿಯಮಬಾಹಿರವಾಗಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಗಣಿ ಇಲಾಖೆ ಪರವಾನಿಗೆ ನೀಡಿದೆ. ಆದರೆ, ಈ ವಿಚಾರ ಅರಣ್ಯ ಇಲಾಖೆಗೆ ತಿಳಿದೇ ಇಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. ಹೀಗಾಗಿ, ರಾಜ್ಯದಲ್ಲಿ ಯಾವ್ಯಾವ ಕಡೆ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಲೈಸನ್ಸ್ ನೀಡಲಾಗಿತ್ತು ಎಂಬ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಬೇಕು. ಈ ಕುರಿತ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಮಾ.31ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ, ಅರಣ್ಯ ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿರುವ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿ ಆದೇಶ ಹೊರಡಿಸುವುದಾಗಿ ಪೀಠ ಹೇಳಿತ್ತು. ಅಂತಿಮವಾಗಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಈ ಕುರಿತು ತನಿಖೆಗೆ ನಿರ್ದೇಶಿಸಿ ಆದೇಶ ಹೊರಡಿಸಿತು.

ವಿಚಾರಣೆ ವೇಳೆ ಸರಕಾರಿ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರಿಗೆ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದ್ದು ನಿಜ. ಆದರೆ, ಆ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತಂದಿರಲಿಲ್ಲ. ಆನಂತರ ಜಾಗ ಅರಣ್ಯ ಇಲಾಖೆಗೆ ಸೇರಿದ್ದೆಂದು ತಿಳಿದು ಬಂದಿದೆ ಎಂದು ಅರ್ಜಿದಾರರಿಗೆ ಅರಣ್ಯ ಪ್ರದೇಶದ 525 ಎಕರೆ ನೀಡಿ ತಪ್ಪಾಗಿರುವುದನ್ನು ಒಪ್ಪಿಕೊಂಡರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News