ಸಚಿವ ಈಶ್ವರಪ್ಪ ವಜಾಕ್ಕೆ ಒತ್ತಾಸಯಿಸಿ ಫೆ.21ರಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿ.ಕೆ.ಶಿವಕುಮಾರ್
ಬೆಂಗಳೂರು, ಫೆ.18: ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಶಾಸಕರು ಸದನದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಶಕ್ತಿ ತುಂಬಲು ಮತ್ತು ದೇಶದ ಸಾಂವಿಧಾನಿಕ ಆಶಯಗಳನ್ನು ನಿರಾಕರಿಸುವ ಪ್ರಯತ್ನಗಳನ್ನು ತಡೆಯಲು ಈ ವಿಷಯವನ್ನು ರಾಜ್ಯವ್ಯಾಪಿಯಾಗಿ ತೆಗೆದುಕೊಂಡು ಹೋಗಲು ಪ್ರದೇಶ ಕಾಂಗ್ರೆಸ್ ಸಮಿತಿ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಅದರಂತೆ, ಫೆ.21ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, ವಿಧಾನಸಭಾ ಕ್ಷೇತ್ರದ ಕೇಂದ್ರ ಸ್ಥಾನಗಳಲ್ಲಿ ಹಾಗೂ ತಾಲೂಕು ಕೇಂದ್ರ ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಸ್ಥಳೀಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ತ್ರಿವರ್ಣ ಧ್ವಜವನ್ನು ಪ್ರದರ್ಶಿಸುತ್ತಾ ತ್ರಿವರ್ಣ ಧ್ವಜದ ಗೌರವವನ್ನು ಎತ್ತಿ ಹಿಡಿಯುವಂತಾಗಲು ತಪ್ಪದೇ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅವರು ಎಲ್ಲ ಜಿಲ್ಲ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಪ್ರತಿಭಟನಾ ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಜನ ಸೇರುವಂತೆ ಮಾಡಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು. ತದನಂತರ, ವಿಧಾನಸಭಾ ಕ್ಷೇತ್ರದ ಕೇಂದ್ರ ಸ್ಥಾನದಲ್ಲಿ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನಾ ಕಾರ್ಯಕ್ರಮದ ನಂತರ ಸ್ಥಳೀಯ ತಹಶೀಲ್ದಾರರಿಗೆ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೆ ನಿಯೋಜಿತ ಕೆಪಿಸಿಸಿ ಸಂಯೋಜಕರು ಈ ಪ್ರತಿಭಟನಾ ಕಾರ್ಯಕ್ರಮಗಳಲ್ಲಿ ಉಪಸ್ಥಿತರಿದ್ದು, ಪ್ರತಿಯೊಂದು ತಾಲೂಕು ಮತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮಗಳು ತಪ್ಪದೆ ನಡೆಯುವಂತೆ ನಿಗಾವಹಿಸಬೇಕು ಎಂದು ಶಿವಕುಮಾರ್ ಪತ್ರದಲ್ಲಿ ಸೂಚನೆ ನೀಡಿದ್ದಾರೆ.