ಅನಧಿಕೃತ ಫ್ಲೆಕ್ಸ್ ಅಳವಡಿಕೆ ಆರೋಪ: ಯುವಕಾಂಗ್ರೆಸ್ ಅಧ್ಯಕ್ಷ ನಲಪಾಡ್ ವಿರುದ್ಧ ಪ್ರಕರಣ ದಾಖಲು

Update: 2022-02-19 12:17 GMT
ಮುಹಮ್ಮದ್ ನಲಪಾಡ್ (Photo credit: Facebook)

ಬೆಂಗಳೂರು, ಫೆ.19: ಅನಧಿಕೃತ ಫ್ಲೆಕ್ಸ್ ಅಳವಡಿಕೆ ಆರೋಪದಡಿ ರಾಜ್ಯ ಯುವಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ನಲಪಾಡ್ ವಿರುದ್ಧ ಪ್ರಕರಣ ದಾಖಲಾಗಿದೆ. 

ನಗರದ ಟೌನ್ ಹಾಲ್ ಮುಂಭಾಗ, ಕಾರ್ಪೋರೇಷನ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಕೆ ಬಗ್ಗೆ ಬಿಬಿಎಂಪಿ ಕಂದಾಯ ಅಧಿಕಾರಿ ಹಾಗೂ ಸಾಮಾಜಿಕ ಹೋರಾಟಗಾರರಿಂದ ಪ್ರತ್ಯೇಕ ಎರಡು ದೂರು ದಾಖಲಾದ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫ್ಲೆಕ್ಸ್, ಬ್ಯಾನರ್ ನಿಷೇಧಿಸಿ ಬಿಬಿಎಂಪಿ ಮತ್ತು ಸರಕಾರ ಆದೇಶಿಸಿದೆ. ಅಲ್ಲದೇ ಈ ಬಗ್ಗೆ ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಇದೀಗ ನಗರದಲ್ಲಿ ಅಳವಡಿಸುವ ಅನಧಿಕೃತ ಫ್ಲೆಕ್ಸ್, ಬ್ಯಾನರ್‍ಗಳನ್ನು ತೆರವುಗೊಳಿಸಲು ಮತ್ತು ಕಾನೂನು ಉಲ್ಲಂಘಿಸಿದವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಸರಕಾರಕ್ಕೆ ಕೋರ್ಟ್ ಆದೇಶಿಸಿದೆ.

ಈ ನಡುವೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭದ ಹಿನ್ನೆಲೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಪೋರೇಷನ್ ವೃತ್ತದ ಸುತ್ತಮುತ್ತ ಫ್ಲೆಕ್ಸ್, ಬ್ಯಾನರ್ ಅಳವಡಿಸಲಾಗಿದೆ. ಈ ಬಗ್ಗೆ ಕ್ರಮ ವಹಿಸಬೇಕಾಗಿ ಹಲಸೂರು ಗೇಟ್ ಠಾಣೆಯಲ್ಲಿ ಪ್ರತ್ಯೇಕ ಎರಡು ದೂರು ದಾಖಲಾಗಿತ್ತು.

ಹಾಗಾಗಿ, ಪೊಲೀಸರು, ಬಿ.ಕೆ.ಹರಿಪ್ರಸಾದ್ ಅಭಿನಂದನಾ ಕಾರ್ಯಕ್ರಮಕ್ಕೆ 150ಕ್ಕೂ ಹೆಚ್ಚು ಫ್ಲೆಕ್ಸ್ ಅಳವಡಿಕೆ ಮಾಡಿದ್ದ ನಲಪಾಡ್ ಮತ್ತು ತಂಡದ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News