ಸಾಮಾಜಿಕ, ಆರ್ಥಿಕ ಸಮೀಕ್ಷೆ ವರದಿ ಒಪ್ಪಿ, ಸುಪ್ರೀಂ ಕೋರ್ಟ್ ಮುಂದಿರಿಸಿ: ಸಿದ್ದರಾಮಯ್ಯ
ಬೆಂಗಳೂರು, ಫೆ. 22: ‘ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನಿರಾಕರಣೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವೂ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ‘ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ'ಯ ವರದಿಯನ್ನು ಒಪ್ಪಿಕೊಂಡು ಸುಪ್ರೀಂ ಕೋರ್ಟ್ ಮುಂದೆ ಇರಿಸಬೇಕು' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿನ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನನ್ನ ಪ್ರಕಾರ ಈ ವರದಿ ಸುಪ್ರೀಂ ಕೋರ್ಟ್‍ನ ಆದೇಶದಲ್ಲಿರುವ ಷರತ್ತುಗಳನ್ನು ಪೂರೈಸುತ್ತದೆ. ಸರಕಾರ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದಂತೆ ಕಾಣುತ್ತಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಒಮ್ಮೆ ಈ ವಿಷಯವನ್ನು ಉಲ್ಲೇಖಿಸಿದ್ದು ಬಿಟ್ಟರೆ ಸರಕಾರ ಈ ಬಗ್ಗೆ ಚರ್ಚೆ ನಡೆಸಿರುವ ಮಾಹಿತಿ ಇಲ್ಲ' ಎಂದು ದೂರಿದರು.
‘ರಾಜ್ಯ ಸರಕಾರ ಈ ಕೂಡಲೇ ಕಾನೂನು ತಜ್ಞರು ಹಾಗೂ ವಿಪಕ್ಷದವರನ್ನು ಕರೆದು ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಬೇಕು. ಇಲ್ಲದಿದ್ದರೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಸಂವಿಧಾನಕ್ಕೆ 73 ಹಾಗೂ 74ನೆ ತಿದ್ದುಪಡಿ ತಂದು ಹಿಂದುಳಿದ ವರ್ಗ, ಮಹಿಳೆಯರಿಗೆ ನೀಡಿದ್ದ ಮೀಸಲಾತಿ ಮಣ್ಣುಪಾಲಾಗುತ್ತದೆ. ಕಾಂತರಾಜ್ ಅವರ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತರಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು.
‘ನಮ್ಮ ಸರಕಾರದ ಅವಧಿಯಲ್ಲಿ ಕಾಂತರಾಜ್ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮನೆ ಮನೆಗೆ ತೆರಳಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಮಾಡಿದೆ. ಹೀಗಾಗಿ ರಾಜ್ಯ ಸರಕಾರ ತಕ್ಷಣ ಸುಪ್ರೀಂ ಕೋರ್ಟ್ ಹೇಳಿರುವ ಮೂರು ಹಂತದ ವಿಶ್ಲೇಷಣೆಯನ್ನು ಪೂರ್ಣಗೊಳಿಸಿರುವ ವರದಿ ನಮ್ಮ ಬಳಿಯಿದೆ, ಈ ಆಧಾರದ ಮೇಲೆ ಮೀಸಲಾತಿ ನೀಡಲು ಅವಕಾಶ ಕೇಳಬೇಕು. ಸರಕಾರ ಇದನ್ನು ಮಾಡದೆ ಹೋದರೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಜನರ ಮೀಸಲಾತಿ ಸೌಲಭ್ಯ ಕೈತಪ್ಪಿಹೋಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದರು.
‘ಸುಪ್ರೀಂ ಕೋರ್ಟ್ ಆದೇಶದಿಂದಾಗಿ ದೇಶದ ಎಲ್ಲ್ಲ ರಾಜ್ಯಗಳಲ್ಲಿ ಹಿಂದುಳಿದ ಜಾತಿಗಳಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಸೌಲಭ್ಯ ಸಿಗುವುದಿಲ್ಲ. ಈಗ ನಮ್ಮಲ್ಲಿ ಬೆಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಯಬೇಕಿದ್ದು, ಈ ಚುನಾವಣೆಯಲ್ಲಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಸೌಲಭ್ಯ ತಪ್ಪಿ ಹೋಗಲಿದೆ. ನಮ್ಮ ರಾಜ್ಯದಲ್ಲಿ ಹಿಂದುಳಿದ ಜಾತಿಗಳಿಗೆ ಶೇ.33ರಷ್ಟು ಮೀಸಲಾತಿ ಇದೆ. ಆದರೆ ಇದು ಮುಂಬರುವ ಬೆಂಗಳೂರು ಮಹಾನಗರ ಪಾಲಿಕೆ, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳಿಗೆ ಅನ್ವಯವಾಗುವುದಿಲ್ಲ' ಎಂದು ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್ ತೀರ್ಪುಗಳು ಸೇರಿದಂತೆ ಅಂಕಿ-ಅಂಶಗಳೊಂದಿಗೆ ವಿವರಿಸಿದರು.