ಶಾಲಾ-ಕಾಲೇಜು ‘ಕಟ್ಟಡ ಮತ್ತು ಅಗ್ನಿ ಸುರಕ್ಷತೆ’: ಪ್ರಮಾಣಪತ್ರ ನೀಡಿಕೆ ಸರಳೀಕರಣಕ್ಕೆ ಪ್ರಯತ್ನ; ಸಚಿವ ಬಿ.ಸಿ.ನಾಗೇಶ್

Update: 2022-02-22 16:14 GMT

ಬೆಂಗಳೂರು, ಫೆ. 22: ಶಾಲಾ-ಕಾಲೇಜುಗಳ ‘ಕಟ್ಟಡ ಮತ್ತು ಅಗ್ನಿ ಸುರಕ್ಷತೆ’, ಹೊಸ ಮಾನ್ಯತೆ ಮತ್ತು ಮಾನ್ಯತೆ ನವೀಕರಣವನ್ನು ಸರಳೀಕರಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಇಂದಿಲ್ಲಿ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿನ ತಮ್ಮ ಕಚೇರಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಅಗ್ನಿಶಾಮಕ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಹೊಸ ಶಾಲಾ-ಕಾಲೇಜುಗಳ ಆರಂಭ ಮತ್ತು ನವೀಕರಣ ಕುರಿತು ಶಿಕ್ಷಣ ಸಂಸ್ಥೆಗಳು ರಾಜ್ಯ ಸರಕಾರಕ್ಕೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಹಲವಾರು ಮನವಿಗಳನ್ನು ಸಲ್ಲಿಸಿದ್ದಾರೆ.

ಹೊಸ ಶಾಲಾ-ಕಾಲೇಜುಗಳ ಆರಂಭ ಮತ್ತು ಮಾನ್ಯತೆ ನವೀಕರಣ ವೇಳೆ ಲೋಕೋಪಯೋಗಿ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆಯಿಂದ ನಿರಪೇಕ್ಷಣ ಪತ್ರ ಪಡೆಯಬೇಕಿದೆ. ಆದರೆ, ಒಂದು ಮಹಡಿ ಇರುವ ಕಟ್ಟಡಕ್ಕೂ ಹತ್ತಾರು ನಿಯಮಗಳನ್ನು ವಿಧಿಸಲಾಗಿದೆ. ಇದರಿಂದ ಹೊಸ ಮಾನ್ಯತೆ ಪಡೆದುಕೊಳ್ಳುವುದು ಹಾಗೂ ಈಗಾಗಲೇ ಇರುವ ಕಟ್ಟಡಗಳ ಮಾನ್ಯತೆ ನವೀಕರಣಕ್ಕೆ ಸಮಸ್ಯೆಯಾಗುತ್ತಿದೆ.

ಮಾನ್ಯತೆ ನವೀಕರಣವಾಗದೆ ಲಕ್ಷಾಂತರ ಮಕ್ಕಳ ಶಿಕ್ಷಣಕ್ಕೆ ತೊಡಕು ಉಂಟಾಗುತ್ತದೆ ಎನ್ನುವ ಆತಂಕವನ್ನು ಶಿಕ್ಷಣ ಸಂಸ್ಥೆಗಳು, ಆಡಳಿತ ಮಂಡಳಿಗಳು ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರಳೀಕರಣಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಇನ್ನು ಕೆಲವು ನಿಯಮಗಳಿಗೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿ ಮನವಿಗಳು ಬಂದ ಹಿನ್ನೆಲೆಯಲ್ಲಿ ಸಭೆ ನಡೆಸಿ ಅಧಿಕಾರಿಗಳ ಜೊತೆ ವಿವರವಾಗಿ ಚರ್ಚಿಸಲಾಗಿದೆ’ ಎಂದು ಅವರು ತಿಳಿಸಿದರು.

‘ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸುವ ಜೊತೆಗೆ ಮಾನ್ಯತೆ ನವೀಕರಣವನ್ನು ಸರಳೀಕರಣ ಮಾಡುವ ಪ್ರಯತ್ನಗಳು ನಡೆದಿವೆ. ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳಿಂದ ರಾಜ್ಯ ಸರಕಾರಕ್ಕೆ ಸಲ್ಲಿಕೆಯಾಗಿರುವ ಮನವಿಗಳ ಕುರಿತು ಪರಿಶೀಲನೆ ನಡೆಸಿ ಒಂದು ವಾರದಲ್ಲಿ ವರದಿ ನೀಡಲು ಅಗ್ನಿಶಾಮಕ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸಭೆಯಲ್ಲಿ ತಿಳಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಸಭೆಯಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಆರ್.ವಿಶಾಲ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಕೃಷ್ಣಾರೆಡ್ಡಿ, ಅಗ್ನಿಶಾಮಕ ಇಲಾಖೆ ಉಪ ನಿರ್ದೇಶಕ ವೈ.ಎ.ಕೌಸರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News