×
Ad

ಸರಕಾರಿ ಅಭಿಯೋಜಕರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿ: ಹೈಕೋರ್ಟ್

Update: 2022-02-23 18:37 IST

ಬೆಂಗಳೂರು, ಫೆ.23: ರಾಜ್ಯದ ನ್ಯಾಯಾಲಯಗಳಲ್ಲಿ ಖಾಲಿ ಇರುವ 300ಕ್ಕೂ ಅಧಿಕ ಸರಕಾರಿ ಅಭಿಯೋಜಕರ ಹುದ್ದೆಗಳನ್ನು ಮುಂದಿನ 3 ತಿಂಗಳಲ್ಲಿ ಭರ್ತಿ ಮಾಡಬೇಕು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶಿಸಿದೆ. 

ಕರ್ನಾಟಕ ರಾಜ್ಯದ ನ್ಯಾಯಾಲಯಗಳಲ್ಲಿ ಸರಕಾರಿ ಅಭಿಯೋಜಕರ ಕೊರತೆ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ, ಈ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಸರಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಖಾಲಿ ಇರುವ ಎಪಿಪಿಗಳ ಹುದ್ದೆ ಭರ್ತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 4 ತಿಂಗಳು ಕಾಲಾವಕಾಶ ನೀಡಿದರೆ ಎಲ್ಲ್ಲ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸರಕಾರಿ ಅಭಿಯೋಜಕರಿಲ್ಲದೆ ನ್ಯಾಯಾಲಯದ ಕಲಾಪಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಸರಕಾರದ ಮಾಹಿತಿಯಂತೆಯೇ 300ಕ್ಕೂ ಅಧಿಕ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗಳು ಖಾಲಿ ಇವೆ. ಅಂದರೆ 300 ಕೋರ್ಟ್‍ಗಳಿಗೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಆಗುತ್ತಿಲ್ಲ ಎಂದೇ ಅರ್ಥ. ಇದರಿಂದ ಕಕ್ಷಿದಾರರಿಗೂ, ವಿಚಾರಣಾಧೀನ ಕೈದಿಗಳಿಗೂ ತೊಂದರೆಯಾಗುತ್ತಿದೆ. ಹೀಗಾಗಿ, 3 ತಿಂಗಳ ಒಳಗೆ ಖಾಲಿ ಹುದ್ದೆಗಳ ಭರ್ತಿಗೆ ಸರಕಾರ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು ನಿರ್ದೇಶಿಸಿತು. ವಿಚಾರಣೆಯನ್ನು ಜೂನ್ ಮೊದಲ ವಾರಕ್ಕೆ ಮುಂದೂಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News