ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಿದರೆ ಎಫ್ ಐಆರ್ ಖಚಿತ: ಬಿಬಿಎಂಪಿ ಮುಖ್ಯಆಯುಕ್ತ ಗೌರವ್ ಗುಪ್ತಾ
ಬೆಂಗಳೂರು, ಫೆ.23: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಫ್ಲೆಕ್ಸ್, ಬ್ಯಾನರ್ ಹಾಕುವುದಕ್ಕೆ ಕಡಿವಾಣ ಹಾಕಬೇಕು. ಈ ನಿಟ್ಟಿನಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಅಳವಡಿಸಿದರೆ ತಪ್ಪಿತಸ್ಥರ ವಿರುದ್ಧ ಮೊಕದ್ದಮೆ ದಾಖಸುವಂತೆ ಆಯಾ ವಲಯ ಇಂಜಿನಿಯರ್‍ಗಳಿಗೆ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬ್ಯಾನರ್, ಫ್ಲೆಕ್ಸ್‍ಗೆ ಅನುಮತಿ ಇಲ್ಲದಿದ್ದರೂ ನಗರದಲ್ಲಿ ರಾರಾಜಿಸುತ್ತಿರುವ ಕುರಿತು ದೂರುಗಳು ಕೇಳಿಬಂದಿವೆ. ಹಾಗಾಗಿ ಅಳವಡಿಸುವವರ ಮೇಲೆ ಎಫ್‍ಐಆರ್ ದಾಖಲು ಮಾಡಬೇಕೆಂದು ಇಂಜಿನಿಯರಿಂಗ್‍ಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಬಿಬಿಎಂಪಿ ಅಧಿನಿಯಮದ ಪ್ರಕಾರ ಪಾಲಿಕೆ ಅಂಗೀಕೃತ ಜಾಹೀರಾತು ಫಲಕಗಳಿಗೆ ಸೀಮಿತ ಅವಕಾಶವಿದೆ. ಅದರ ಹೊರತಾಗಿ ಸಭೆ, ಸಮಾರಂಭ, ಕಾರ್ಯಕ್ರಮಗಳ ಫಲಕಗಳಿಗೆ ಅವಕಾಶವಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಫ್ಲೆಕ್ಸ್, ಬಂಟಿಂಗ್ಸ್, ಬ್ಯಾನರ್ ಹಾಕಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ತಪ್ಪಿತಸ್ಥರ ವಿರುದ್ಧ ಪರಿಸರ ಸಂರಕ್ಷಣೆ ಕಾಯ್ದೆ 1986, ಸೆಕ್ಷನ್ 5ರ ಅಡಿಯಲ್ಲಿ ದೂರು ದಾಖಲಿಸುವಂತೆ ಸೂಚನೆ ನೀಡಲಾಗಿದೆ ಎಂದರು.