ಮಂಗಳೂರು ಮೇಯರ್ ಚುನಾವಣೆ ಮುಂದೂಡಿಕೆ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿಗಳಿಗೆ ಮಾ.2ರಂದು ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಿ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಪಾಲಿಕೆಯ 23ನೇ ಅವಧಿಗೆ ಮೇಯರ್ ಸ್ಥಾನವನ್ನು ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನವನ್ನು ಹಿಂದುಳಿದ ವರ್ಗ ಎ (ಮಹಿಳೆ) ವರ್ಗಕ್ಕೆ ಮೀಸಲಿರಿಸಲಾಗಿತ್ತು. ಅದರಂತೆ ಮಾ.2ಕ್ಕೆ ಚುನಾವಣೆ ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಆದರೆ ಜ.19ರಂದು ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶವು ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೂ ಅನ್ವಯವಾಗುವುದೇ ಎಂಬ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಹಾಗೂ ಸರ್ಕಾರಕ್ಕೂ ದ.ಕ. ಜಿಲ್ಲಾಧಿಕಾರಿ ಪತ್ರ ಬರೆದಿದ್ದರು. ಆದರೆ ಈವರೆಗೂ ಸರ್ಕಾರದಿಂದ ಯಾವುದೇ ಸ್ಪಷ್ಟೀಕರಣ ಬಾರದೆ ಇರುವುದರಿಂದ ಚುನಾವಣೆ ಮುಂದೂಡುವಂತೆ ಪಾಲಿಕೆ ಆಯುಕ್ತರಿಗೆ ಮೈಸೂರು ಪ್ರಾದೇಶಿಕ ಆಯುಕ್ತರ ಕಾರ್ಯಾಲಯದಿಂದ ಸೂಚನೆ ಬಂದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಿ ಆದೇಶಿಸಿದ್ದಾರೆ.