ಮಂಗಳೂರು ರಥಬೀದಿಯ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಗೊಂದಲ: ಸಮಗ್ರ ವರದಿ ನೀಡಲು ದ.ಕ. ಜಿಲ್ಲಾಧಿಕಾರಿ ಸೂಚನೆ
ಮಂಗಳೂರು, ಮಾ.5: ನಗರದ ರಥಬೀದಿಯ ಸರಕಾರಿ ಪದವಿ ಕಾಲೇಜಿನಲ್ಲಿ ಹಿಜಾಬ್ ಗೊಂದಲದ ಬಗ್ಗೆ ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ ಸಮಗ್ರ ವರದಿ ನೀಡುವಂತೆ ದ.ಕ.ಜಿಲ್ಲಾ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟರ್‌ಗೆ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚನೆ ನೀಡಿದ್ದಾರೆ.
ಘಟನೆಯ ಬಗ್ಗೆ ಈಗಾಗಲೇ ಬಂದರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗೊಂದಲದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಮಾಧ್ಯಮಗಳಿಗೆ ಡಿಸಿ ತಿಳಿಸಿದರು.
ಮಾ.12ರವರೆಗೆ ಆನ್‌ಲೈನ್: ಹಿಜಾಬ್ ಗೊಂದಲದ ಹಿನ್ನಲೆಯಲ್ಲಿ ಮಾ.12ರವರೆಗೆ ನಡೆಯಲಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಅಲ್ಲದೆ ಆನ್‌ಲೈನ್‌ನಲ್ಲಿ ತರಗತಿ ನಡೆಸಲು ನಿರ್ಧರಿಸಲಾಗಿದೆ.
ದೂರು, ಪ್ರತಿದೂರು ದಾಖಲು: ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳಾದ ಸಾಯಿ ಸಂದೇಶ್, ಸುಮಂತ್ ಆಳ್ವ, ನಿತೇಶ್ ಸಹಿತ 15 ಮಂದಿ ವಿರುದ್ಧ ದೂರು ದಾಖಲಾಗಿದೆ.
ಈ ಮಧ್ಯೆ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯನ್ನು ತರಾಟೆಗೆ ತೆಗೆದುಕೊಂಡ ವಿದ್ಯಾರ್ಥಿಯ ಫೋಟೋವನ್ನು ಬಳಸಿ ಅವಾಚ್ಯ ಶಬ್ದಗಳನ್ನು ಜಾಲತಾಣದಲ್ಲಿ ಹರಿಯಬಿಟ್ಟು ಆತನಿಗೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ವಿದ್ಯಾರ್ಥಿಯೊಬ್ಬ ಸೈಬರ್ ಪೊಲೀಸ್ ಠಾಣೆಗೆ ಪ್ರತಿ ದೂರು ನೀಡಿದ್ದಾರೆ.
ವಿದ್ಯಾರ್ಥಿನಿಯು ಕೆಲವು ಯುವಕರಿಗೆ ಅವಾಚ್ಯವಾಗಿ ನಿಂದಿಸಿದ ಬಗ್ಗೆಯೂ ಬಂದರು ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.