ಉಡುಪಿಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಕ್ರಮ: ಜಿಲ್ಲಾಧಿಕಾರಿ ಕೂರ್ಮಾರಾವ್
ಉಡುಪಿ, ಮಾ.6: ಬಾಲ್ಯ ವಿವಾಹ ಪ್ರಕರಣ ಕಂಡುಬಂದಲ್ಲಿ ತಕ್ಷಣ ಉಚಿತ ಟೋಲ್ ಪ್ರೀ ಸಂಖ್ಯೆ 1098ಗೆ ಕರೆ ಮಾಡಿ ಮಾಹಿತಿ ನೀಡುವುದರಿಂದ ಮಕ್ಕಳನ್ನು ರಕ್ಷಿಸಲು ಸಾಧ್ಯ. ಈ ಮೂಲಕ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಬಾಲ್ಯ ವಿವಾಹ ನಿಷೇಧ ಭಾಗೀದಾರ ಇಲಾಖೆಗಳ ಸಹಯೋಗದೊಂದಿಗೆ ರವಿವಾರ ಮಣಿಪಾಲ ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಆಯೋಜಿಸಲಾದ ಬಾಲ್ಯ ವಿವಾಹ ನಿಷೇಧ ಆಭಿಯಾನ ‘ವಿಡಿಯೋ ಆನ್ ವೀಲ್ಸ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಬಾಲ್ಯ ವಿವಾಹವು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಪಿಡುಗನ್ನು ಸಮಾಜ ದಿಂದ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಪಾತ್ರ ಮುಖ್ಯವಾಗಿದೆ. ಬಾಲ್ಯ ವಿವಾಹದಿಂದ ಹೆಣ್ಣು ಮಕ್ಕಳ ಸಂಪೂರ್ಣ ಜೀವನ ನಲುಗಲಿದ್ದು, ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದದ ಮೇಲೆ ಅನೇಕ ದುಷ್ಪರಿಣಾಮಗಳು ಉಂಟಾಗುತ್ತವೆ. ಅಲ್ಲದೇ ಶಿಕ್ಷಣದಿಂದಲೂ ವಂಚಿತರಾಗಲಿದ್ದು ತಮ್ಮ ಬದುಕುವ ಹಕ್ಕು, ಅಭಿವೃದ್ಧಿ ಹೊಂದುವ ಹಕ್ಕು, ರಕ್ಷಣೆಯ ಹಕ್ಕುಗಳನ್ನು ಕಳೆದುಕೊಳ್ಳಲಿದ್ದಾರೆ ಎಂದರು.
ಬಾಲ್ಯ ವಿವಾಹದ ದುಷ್ಪರಿಣಾಮಗಳ ಕುರಿತಂತೆ ಮಕ್ಕಳಿಗೆ ಶಾಲೆಗಳಲ್ಲಿ ಶಿಕ್ಷಕರು ಅರಿವು ಮೂಡಿಸಬೇಕು. ಪೋಷಕರೂ ಸಹ ಇದರ ದುಷ್ಪರಿಣಾಮಗಳ ಕುರಿತು ಜಾಗೃತರಾಗಬೇಕು. ಜಿಲ್ಲೆಯಲ್ಲಿ ವಲಸೆ ಕಾರ್ಮಿಕರು ಹೆಚ್ಚು ನೆಲಸಿ ರುವ ಪ್ರದೇಶಗಳಲ್ಲಿ ಈ ಬಗ್ಗೆ ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದ ಜಿಲ್ಲಾಧಿಕಾರಿ ತಿಳಿಸಿದರು.
ಬಾಲ್ಯ ವಿವಾಹ ನಿಷೇಧ ಕುರಿತು ಪ್ರಮಾಣ ವಚನ ಬೋಧಿಸಿದ ಹಿರಿಯ ಸಿವಿಲ್ ನ್ಯಾಯಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಮಾತನಾಡಿ, ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಲ್ಲಿನ ಅಂಶಗಳು, ಶಿಕ್ಷೆಯ ಪ್ರಮಾಣ ಕುರಿತಂತೆ ಸಾರ್ವಜನಿಕವಾಗಿ ಹೆಚ್ಚಿನ ಅರಿವು ಮೂಡಿಸಬೇಕು. ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ಇತರೆ ಜಿಲ್ಲೆಗಳಿಗೆ ಹೋಲಿಸಿದ್ದಲ್ಲಿ ಉಡುಪಿ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಅತ್ಯಂತ ಕಡಿಮೆ ಇದೆ. ಆದರೆ ಜಿಲ್ಲೆಯ ವಲಸೆ ಕಾರ್ಮಿಕರಲ್ಲಿ ಈ ಪದ್ದತಿ ಇರುವ ಸಾಧ್ಯತೆಗಳಿದ್ದು, ಈ ಬಗ್ಗೆ ಪೋಷಕರಿಗೆ ಸೂಕ್ತ ಅರಿವು ಮೂಡಿಸಬೇಕು. ವಲಸೆ ಕಾರ್ಮಿಕರಿಗೆ ಆಮಿಷ ನೀಡಿ ಅವರ ಮಕ್ಕಳನ್ನು ಬಾಲ್ಯ ವಿವಾಹ ಮಾಡಿಕೊಳ್ಳುವ ಸಂಭವ ಇದೆ ಎಂದು ತಿಳಿಸಿದರು.
ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ನೀಡುವುದರ ಮೂಲಕ ಮತ್ತು ಪೋಷಕರಿಗೆ ಜಾಗೃತಿ ಮೂಡಿಸುವ ಮೂಲಕ ಬಾಲ್ಯ ವಿವಾಹವನ್ನು ತಡೆಯಲು ಸಾಧ್ಯವಿದೆ. ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳ ಮತ್ತು ಗ್ರಾಪಂಗಳ ಕಸ ವಿಲೇವಾರಿ ವಾಹನಗಳಲ್ಲಿ ಬಾಲ್ಯ ವಿವಾಹದ ದುಷ್ಪರಿಣಾಮಗಳು ಮತ್ತು ಕಾಯಿದೆಯ ಬಗ್ಗೆ ಜಾಗೃತಿ ಸಂದೇಶ ಪ್ರಚಾರ ಮೂಡುವ ಮೂಲಕ, ಈ ಪಿಡುಗಿನ ಬಗ್ಗೆ ವ್ಯಾಪಕ ಅರಿವು ಮೂಡಿಸಬೇಕು ಎಂದರು.
ಬಳಿಕ ಸಹಿ ಸಂಗ್ರಹಣಾ ಅಭಿಯಾನ ನಡೆಯಿತು. ಜಿಲ್ಲಾ ನೆಹರು ಯುವ ಕೇಂದ್ರದ ಯೋಜನಾ ಸಮನ್ವಯಾಧಿಕಾರಿ ವಿಲ್ಪ್ರಡ್ ಡಿಸೋಜ ಉಪಸ್ಥಿತರಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪ ನಿರ್ದೇಶಕ ಶೇಷಪ್ಪ ಸ್ವಾಗತಿಸಿದರು. ಶಿಶು ಅಭಿವೃಧ್ದಿ ಯೋಜನಾಧಿಕಾರಿ ವೀಣಾ ವಿವೇಕಾನಂದ ವಂದಿಸಿದರು.