ಕೇಬಲ್ ಕಾರ್ ಗೆ ಶೀಘ್ರವೇ ಟೆಂಡರ್: ಸಚಿವ ಕೋಟಾ ಶ್ರೀನಿವಾಸ ಪೂಜಾರಿ
Update: 2022-03-07 19:03 IST
ಬೆಂಗಳೂರು, ಮಾ.7: ಮಧುಗಿರಿ ಏಕಶಿಲಾ ಬೆಟ್ಟಕ್ಕೆ ಕೇಬಲ್ ಕಾರ್ ಅಳವಡಿಸುವ ಸಂಬಂಧ ಶೀಘ್ರವೇ ಟೆಂಡರ್ ಪ್ರಕ್ರಿಯೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸಪೂಜಾರಿ ತಿಳಿಸಿದರು.
ಸೋಮವಾರ ವಿಧಾನ ಪರಿಷತ್ತಿನ ಕಲಾಪದಲ್ಲಿ ಅವರು, ಯೋಜನೆ ಸಂಬಂಧ ಈಗಾಗಲೇ ಡಿಪಿಆರ್ ಸಿದ್ಧವಾಗಿದೆ. 2 ಬಾರಿ ಟೆಂಡರ್ ಕರೆಯಲಾಗಿದ್ದು, ಉತ್ತಮ ಪ್ರತಿಕ್ರಿಯೆ ಬಂದಿಲ್ಲ. ಕಳೆದ ತಿಂಗಳು ಕೂಡಾ ಟೆಂಡರ್ ಆಹ್ವಾನಿಸಲಾಗಿತ್ತು ಎಂದು ಹೇಳಿದರು.
ಈ ಯೋಜನಗೆ ರಾಷ್ಟ್ರೀಯ ಪುರಾತತ್ವ ಇಲಾಖೆಯ ಅನುಮೋದನೆಯೂ ಬೇಕಾಗುತ್ತದೆ. ಇದನ್ನು ಪಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, 2016-17ನೆ ಸಾಲಿನ ಬಜೆಟ್‍ನಲ್ಲಿ ಈ ಯೋಜನೆಯನ್ನು ಘೋಷಣೆ ಮಾಡಲಾಗಿತ್ತು. ಆದರೆ ಅನುದಾನ ನಿಗದಿ ಪಡಿಸಿರಲಿಲ್ಲ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ಕೈಗೆತ್ತಿಕೊಳ್ಳಲು ಸರಕಾರ ಮುಂದಾಗಿತ್ತು. ಈ ಸಂಬಂಧ ಎರಡು-ಮೂರು ಬಾರಿ ಟೆಂಡರ್ ಕರೆಯಲಾಗಿತ್ತು ಎಂದು ಅವರು ತಿಳಿಸಿದರು.